ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಲಕ್ಷ ಎಕರೆ ಒತ್ತುವರಿ ತೆರವಿಗೆ ಬಿಎಸ್‌ವೈ ಸೂಚನೆ

ಡಿ.ಸಿ, ಸಿಇಒ ಜೊತೆ ಎಂಟು ಗಂಟೆ ಸಭೆ * ಅಭಿವೃದ್ಧಿ ಚಟುವಟಿಕೆ ಚುರುಕುಗೊಳಿಸಲು ನಿರ್ದೇಶನ
Last Updated 20 ಜನವರಿ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 11.48 ಲಕ್ಷ ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಬಾಕಿ ಇದ್ದು, ಶೀಘ್ರವೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜೊತೆ ಬುಧವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಒತ್ತುವರಿಯಾಗಿರುವ ಸುಮಾರು 14.18 ಲಕ್ಷ ಸರ್ಕಾರಿ ಜಮೀನಿನ ಪೈಕಿ 2.7 ಲಕ್ಷ ಎಕರೆ ಮಾತ್ರ ತೆರವುಗೊಳಿಸಲಾಗಿದೆ’ ಎಂದರು.

‘ಆಯಾ ಪ್ರಾದೇಶಿಕ ಆಯುಕ್ತರು ತಮ್ಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ತಕ್ಷಣ ಪರಿಶೀಲನೆ ನಡೆಸಿ, ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಭೂಮಿ ಒತ್ತುವರಿ ತೆರವುಗೊಳಿಸಿ, ಹರಾಜು ಹಾಕುವಂತೆ ಸೂಚಿಸಿದ್ದೇನೆ’ ಎಂದರು.

‘ಕಂದಾಯ ಗ್ರಾಮವಾಗಿ ಪರಿವರ್ತಿಸಲು ಒಟ್ಟು 2,741 ದಾಖಲೆರಹಿತ ಜನವಸತಿಗಳನ್ನು ಗುರುತಿಸಲಾಗಿದ್ದು, 1,419 ಗ್ರಾಮಗಳ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಈ ಪೈಕಿ, 803 ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಉಳಿದವುಗಳ ಅಂತಿಮ ಅಧಿಸೂಚನೆ ಒಂದು ತಿಂಗಳೊಳಗೆ ಹೊರಡಿಸಲು ಸೂಚಿಸಿದ್ದೇನೆ. ಮೂರು ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.

‘ಮನೆ ಮನೆಗೆ ನಲ್ಲಿ ಸಂಪರ್ಕ ನೀಡುವ ಕಾಮಗಾರಿಗಳನ್ನು ಚುರುಕುಗೊಳಿಸಿ. ಶಾಲೆಗಳು ಮತ್ತು ಅಂಗನವಾಡಿಗಳಿಗೆ ಎರಡು ತಿಂಗಳೊಳಗೆ ಕುಡಿಯುವ ನೀರು ಒದಗಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ 42 ಸಾವಿರ ಶಾಲೆಗಳ ಪೈಕಿ, 16 ಸಾವಿರ ಶಾಲೆಗಳಿಗೆ ಕುಡಿಯುವ ನೀರು ಒದಗಿಸಲು ಕಾರ್ಯಾದೇಶ ನೀಡಲಾಗಿದೆ’ ಎಂದೂ ಅವರು ತಿಳಿಸಿದರು.

‘ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಎರಡು ವರ್ಷ ಮೀರಿದ ಯೋಜನೆಗಳನ್ನು ಪೂರ್ಣಗೊಳಿಸಿ. ಕ್ರಿಯಾ ಯೋಜನೆಗಳನ್ನು ತ್ವರಿತವಾಗಿ ಮಂಜೂರು ಮಾಡಬೇಕು. ಅವುಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಪ್ರಕ್ರಿಯೆ ಸರಳಗೊಳಿಸಲು ನಿರ್ಧರಿಸಲಾಗಿದೆ’ ಎಂದರು.

ತ್ವರಿತ ವಿಲೇವಾರಿಗೆ ಸೂಚನೆ: ‘ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗಾಗಿ ಭೂಸ್ವಾಧೀನಕ್ಕೆ ಸಂಬಂಧಿಸಿದ 14 ಸಾವಿರ ಪ್ರಕರಣಗಳು ಜಿಲ್ಲಾಧಿಕಾರಿಗಳ ಬಳಿ ಬಾಕಿ ಇವೆ. ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಕೋರಿದ್ದಾರೆ. ಈ ಎಲ್ಲ ಪ್ರಕರಣಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸುವಂತೆ ಸೂಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದರು.

‘ಬೇಸಿಗೆ ಸಮೀಪಿಸುತ್ತಿದೆ. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ಮೂಲಕ ಹೆಚ್ಚಿನ ಕೆಲಸ ಒದಗಿಸಬೇಕು. ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅಸಂಘಟಿತ ವಲಯದ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದ ನೆರವು ತಲುಪುವಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದರು.

‘ಪ್ರಧಾನ ಮಂತ್ರಿಗಳ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT