ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ಹತ್ಯೆ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ‌ ಎಂದ ರೇಣುಕಾಚಾರ್ಯ

ಅಕ್ಷರ ಗಾತ್ರ

‌ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಖಂಡಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ. ಆದ್ದರಿಂದ ರಾಜ್ಯ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

‘ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ’ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

‘ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು’ ಎಂದು ಸರ್ಕಾರದ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೂ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಪ್ರವೀಣ್‌ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳನ್ನು ನಡುರಸ್ತೆಯಲ್ಲಿ ಎನ್‌ಕೌಂಟರ್‌ ಮಾಡಬೇಕು. ಹಿಂದೂ ಕಾರ್ಯಕರ್ತರ ಹತ್ಯೆಗಳು ಇಲ್ಲಿಗೆ ಕೊನೆಯಾಗಬೇಕು. ದುಷ್ಕರ್ಮಿಗಳು ಭಯ ಬೀಳುವ ರೀತಿಯಲ್ಲಿ ಕಠಿಣ ಶಿಕ್ಷೆ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

‘ರಾಜ್ಯ ಸರ್ಕಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಜೀ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ’ ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

‘ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್‌ಕೌಂಟರ್ ಮಾಡಬೇಕು’ ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡದ ಸುಳ್ಯದ ನಮ್ಮ ಪಕ್ಷದ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕವಾಗಿ ₹1 ಲಕ್ಷ ಧನಸಹಾಯವನ್ನು ನೀಡುತ್ತಿದ್ದೇನೆ. ನಾವು ಎಷ್ಟು ಕೋಟಿ ಕೊಟ್ಟರೂ ಪ್ರವೀಣ್ ಅವರ ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎನ್ನುವುದು ಗೊತ್ತಿರುವ ವಿಚಾರ. ಆದರೆ, ಪ್ರವೀಣ್ ಕುಟುಂಬದ ದುಃಖದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ರೇಣುಕಾಚಾರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT