ಶನಿವಾರ, ಅಕ್ಟೋಬರ್ 1, 2022
20 °C
ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ

ಜೆಜೆಎಂ ಮೊದಲ ಹಂತದ ಕಾಮಗಾರಿಗೆ ಸೆ.15ರ ಗಡುವು: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜಲ ಜೀವನ ಮಿಷನ್‌ (ಜೆಜೆಎಂ) ಯೋಜನೆಯ ಮೊದಲನೇ ಹಂತದಲ್ಲಿ ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್‌ 15ರೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಜೆಜೆಎಂ ಅಡಿಯಲ್ಲಿ ಕೇವಲ ಕೊಳವೆ ಮಾರ್ಗ ಅಳವಡಿಸಿದರೆ ಸಾಲದು. ಪ್ರತಿ ಮನೆಗೂ ನೀರಿನ ಪೂರೈಕೆ ಆಗಬೇಕು. ವಾರದಲ್ಲಿ ಮೂರು ದಿನ ಅಧಿಕಾರಿಗಳು ಕಡ್ಡಾಯವಾಗಿ ಕಾಮಗಾರಿಗಳ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು’ ಎಂದರು.

ಆಗಸ್ಟ್‌ 8 ರವರೆಗೆ 21.63 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ನೀರಿನ ಸಂಪರ್ಕ ಕಲ್ಪಿಸುವ ಗುರಿ ಇತ್ತು. ಆದರೆ, 21.81 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಿದ್ದು, ಗುರಿ ಮೀರಿದ ಸಾಧನೆಯಾಗಿದೆ. ಎರಡನೇ ಹಂತದ ಕಾಮಗಾರಿಗಳಿಗೆ ಈ ತಿಂಗಳ ಅಂತ್ಯದೊಳಗೆ ಚಾಲನೆ ನೀಡಬೇಕು. ಮೂರನೇ ಹಂತದ ಕಾಮಗಾರಿಗಳ ಆರಂಭಕ್ಕೆ ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಕೊಳಚೆ ನೀರು ನಿರ್ವಹಣೆ: ರಾಜ್ಯದ ಎಲ್ಲ ಗ್ರಾಮಗಳಲ್ಲೂ ಕೊಳಚೆ ನೀರು ನಿರ್ವಹಣೆಗೆ ಸ್ವಚ್ಛ ಭಾರತ ಯೋಜನೆಯಡಿ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

‘ರಾಜ್ಯದ 28,000 ಹಳ್ಳಿಗಳಲ್ಲಿ ಕೊಳಚೆ ನೀರು ನಿರ್ವಹಣೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 19,000 ಹಳ್ಳಿಗಳಿಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ. 8,000 ಹಳ್ಳಿಗಳಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಮಾಹಿತಿ ನೀಡಿದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 16 ಕೋಟಿ ಮಾನವ ದಿನಗಳ ಕೆಲಸ ಸೃಜನೆಗೆ ಎದುರಾಗಿ 16.38 ಕೋಟಿ ಮಾನವ ದಿನಗಳ ಕೆಲಸ ನಡೆದಿದೆ. ಆದರೂ, ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿದೆ. ಅಂತಹ ಕಡೆಗಳಿಗೆ ವಿಶೇಷ ಗಮನಹರಿಸಬೇಕು. ಕಳೆದ ವರ್ಷ ಆರಂಭಿಸಿದ್ದ 10 ಲಕ್ಷ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರಧಾನ ಮಂತ್ರಿ ಆವಾಸ್‌, ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಅಮೃತ ಗ್ರಾಮ ಪಂಚಾಯಿತಿ, ಅಮೃತ ಸರೋವರ ಮತ್ತಿತರ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಹೇಳಿದರು.

ಅತಿವೃಷ್ಟಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಸ್ತಿಗಳು, ಗ್ರಾಮೀಣ ರಸ್ತೆ, ಸೇತುವೆಗಳಿಗೆ ಆಗಿರುವ ಹಾನಿ ಕುರಿತು ತುರ್ತಾಗಿ ವರದಿ ಪಡೆಯಬೇಕು. ದುರಸ್ತಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು