ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಬಿಸಿ ಮೀಸಲಾತಿ ನಿಗದಿಗೆ ಆಯೋಗ: ಸರ್ವಪಕ್ಷಗಳ ಸಭೆ ಒಮ್ಮತದ ತೀರ್ಮಾನ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದವರಿಗೆ ಮೀಸಲಾತಿ *
Last Updated 31 ಮಾರ್ಚ್ 2022, 18:57 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿ ನಿಗದಿ ಮಾಡುವ ಉದ್ದೇಶದಿಂದ ಈ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆ ಗುರುತಿಸುವುದಕ್ಕಾಗಿ ಆಯೋಗವೊಂದನ್ನು ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸ್ಥಳೀಯಸಂಸ್ಥೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ಈ ವಿಷಯ ಹೇಳಿದರು.

ರಾಜಕೀಯ ಹಿಂದುಳಿದಿರುವಿಕೆ ಖಚಿತಪಡಿಸಿಕೊಂಡು ಚುನಾವಣಾ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ರಾಜಕೀಯವಾಗಿ ಹಿಂದುಳಿದಿರುವಿಕೆ ಗುರುತಿಸಲು ನಿಖರ ಮಾಹಿತಿಯ ಅಗತ್ಯವಿದೆ. ಅದಕ್ಕಾಗಿ ಆಯೋಗ ರಚಿಸಿ ಕಾಲಮಿತಿಯಲ್ಲಿ ಮಾಹಿತಿ ಸಂಗ್ರಹಿಸಿ ಬಳಿಕ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗುವುದು. ಈ ವಿಚಾರವಾಗಿ ಸಭೆಯಲ್ಲಿ ಎಲ್ಲ ಪಕ್ಷಗಳೂ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿವೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ಮೀಸಲಾತಿಎಷ್ಟು ನಿಗದಿ ಮಾಡಬೇಕು. ಹಾಗೆ ಮಾಡುವುದರಿಂದ ಆಗುವ ಸಾಧಕ ಬಾಧಕಗಳೇನು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಆಯೋಗವನ್ನು ರಚಿಸಿ ಮಾಹಿತಿಯನ್ನು ಕಲೆ ಹಾಕಲು ಆಯೋಗ ರಚಿಸುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಯಿತು. ಆಯೋಗಕ್ಕೆ ಯಾರನ್ನೆಲ್ಲ ನೇಮಿಸಬೇಕು. ಎಷ್ಟು ಕಾಲಾವಕಾಶ ನೀಡಿ ವರದಿ ಪಡೆಯಬೇಕು ಮುಂತಾದ ವಿಷಯಗಳ ಬಗ್ಗೆ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ಯಾವುದೇ ರೀತಿಯ ಮೀಸಲಾತಿ ಶೇ 50 ಮೀರಬಾರದು. ಈ ಹಿಂದೆ ಮಹಾರಾಷ್ಟ್ರದಲ್ಲಿ ಮೀಸಲಾತಿ ಪ್ರಮಾಣ ಶೇ 50 ಮೀರಿ ಚುನಾವಣೆ ನಡೆಸಿದಾಗ, ನ್ಯಾಯಾಲಯ ಅದನ್ನು ರದ್ದು ಮಾಡಿತ್ತು. ತಮಿಳುನಾಡಿನಲ್ಲೂ ಮೀಸಲಾತಿ ಪ್ರಮಾಣ ಹೆಚ್ಚಿಸಿ ಚುನಾವಣೆ ನಡೆಸಿದ ವಿಚಾರ ನ್ಯಾಯಾಲಯಲ್ಲಿ ಬಾಕಿ ಉಳಿದಿದೆ. ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣ ಶೇ 50 ಮೀರಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಈ ಮಧ್ಯೆ ಮೀಸಲಾತಿ ನಿಗದಿ ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಜೆಡಿಎಸ್‌ ಉಪನಾಯಕ ಬಂಡೆಪ್ಪ ಕಾಶೆಂಪೂರ, ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಮುಂತಾದವರು ಇದ್ದರು.

‘ಮೀಸಲಾತಿ ನೀಡದೇ ಚುನಾವಣೆ ಇಲ್ಲ’

ಹಿಂದುಳಿದವರಿಗೆ ಮೀಸಲಾತಿ ನೀಡದೇ ಚುನಾವಣೆ ನಡೆಸಲು ಸರ್ಕಾರಕ್ಕೆ ಮನಸ್ಸಿಲ್ಲ. ಚುನಾವಣಾ ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತ ರಾಜು ಅವರು ಆರ್ಥಿಕ ಮತ್ತು ಸಾಮಾಜಿಕ ಹಿಂದುಳಿದಿರುವಿಕೆ ಬಗ್ಗೆ ಮಾತ್ರ ವರದಿ ನೀಡಿದ್ದಾರೆ. ಅದರಲ್ಲಿ ರಾಜಕೀಯ ಹಿಂದುಳಿದಿರುವಿಕೆ ಮಾಹಿತಿ ಇಲ್ಲ. ಆದ್ದರಿಂದ ಆ ವರದಿ ಅಪ್ರಸ್ತುತ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದರು.

ಕಾನೂನಾತ್ಮಕ ಪರಿಶೀಲನೆ ಅಗತ್ಯ: ಸಿದ್ದರಾಮಯ್ಯ

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಕಗ್ಗಂಟಾಗಿದೆ. ಆದ್ದರಿಂದ ಮೀಸಲು ಸೌಲಭ್ಯ ಒದಗಿಸುವ ವಿಚಾರವನ್ನು ಕಾನೂನಾತ್ಮಕವಾಗಿ ಪರಿಶೀಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಹೇಳಿದರು.

ಮೀಸಲು ಸೌಲಭ್ಯ ಒದಗಿಸುವುದಕ್ಕೆ ಮೊದಲು ಸಮೀಕ್ಷೆ ನಡೆಸಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಅವರು ಮನವಿ ಮಾಡಿದರು.

ಒಂದು ವೇಳೆ ಇದು ಸಾಧ್ಯವಾಗದಿದ್ದರೆ, ಮತ್ತೊಂದು ಆಯೋಗ ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ನಡೆಸಿದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕೈತಪ್ಪಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT