ಬುಧವಾರ, ಜುಲೈ 28, 2021
21 °C
cycle jatha

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬೆಲೆ ಏರಿಕೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಜನ  ವಿರೋಧಿ ನೀತಿ ಖಂಡಿಸಿ ಬುಧವಾರ (ಜುಲೈ 7) ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ 100 ನಾಟೌಟ್ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಈಗ ಸೈಕಲ್ ಜಾಥಾ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ಭಾಗಗಳಲ್ಲೂ 5 ಕಿ.ಮೀಟರ್‌ನಷ್ಟು ದೂರ ಸೈಕಲ್ ತುಳಿಯುವ ಮೂಲಕ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ’ ಎಂದರು.

‘ಈ ಹಿಂದೆ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ, ರಾಷ್ಟ್ರ ನಾಯಕರು ಸಿಲಿಂಡರ್ ತಲೆ ಮೇಲೆ ಇಟ್ಟುಕೊಂಡು ಬೀದಿ ಹೋರಾಟ ಮಾಡಿದ್ದರು. ವಾಜಪೇಯಿ ಒಮ್ಮೆ ಎತ್ತಿನಗಾಡಿಯಲ್ಲಿ ಸಂಸತ್‌ಗೆ ತೆರಳಿದ್ದರು. ಅವರು ಈ ಹಿಂದೆ ಏನು ಮಾಡಿದ್ದರು, ಈಗ ಅಧಿಕಾರಕ್ಕೆ ಬಂದ ಮೇಲೆ ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ’ ಎಂದು ಆಗ್ರಹಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಮಾತನಾಡಿ, ‘ರಾಷ್ಟ್ರಪತಿ, ಪ್ರಧಾನಿ, ಸುಪ್ರೀಂ ಕೋರ್ಟ್ ಕಚೇರಿಗಳು ಮಾಹಿತಿ ಹಕ್ಕು ವ್ಯಾಪ್ತಿಗೆ ಬರುತ್ತವೆ. ವಜುಭಾಯಿ ವಾಲಾ ಅವರು ರಾಜ್ಯಪಾಲರಾದ ಬಳಿಕ ಆಗಿರುವ ವೆಚ್ಚದ ಬಗ್ಗೆ ಮಾಹಿತಿ ಹಕ್ಕಿನಡಿ ಅರ್ಜಿ ಹಾಕಿದ್ದೆವು. ಆದರೆ, ನಮ್ಮ ಅರ್ಜಿಗೆ ರಾಜ್ಯಪಾಲರ ಕಚೇರಿ, ರಾಜ್ಯಪಾಲರ ಪದ ಬಳಕೆ ಸಾರ್ವಜನಿಕ ಪರಿಭಾಷೆ ವ್ಯಾಪ್ತಿಯಲ್ಲಿ ಬರುತ್ತದೆಯೋ ಇಲ್ಲವೋ ಎಂಬ ವಿಚಾರವಾಗಿ ಕರ್ನಾಟಕ ಮಾಹಿತಿ ಹಕ್ಕಿನ ಆಯೋಗದಲ್ಲಿ ವಿಚಾರಣೆ ಬಾಕಿ ಇರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲವೆಂದು ಉತ್ತರಿಸಿದೆ’ ಎಂದರು.

‘ಯಾವುದೇ ಒಂದು ಪ್ರಕರಣ ವಿಲೇವಾರಿ ಮಾಡದೇ ಅದನ್ನು ಮುಂದಿಟ್ಟುಕೊಂಡು ರಾಜ್ಯಪಾಲರ ಕಚೇರಿಯನ್ನು ಮಾಹಿತಿ ಹಕ್ಕಿನ ವ್ಯಾಪ್ತಿಯಿಂದ ಹೊರಗಿಡುವ ಪ್ರಯತ್ನ ಮಾಡಬಾರದು ಎಂದು ರಾಜ್ಯ ಮಾಹಿತಿ ಹಕ್ಕು ಆಯೋಗಕ್ಕೆ ಮನವಿ ಮಾಡುತ್ತೇನೆ. ಇದಕ್ಕೆ ಅವಕಾಶ ಮಾಡಿಕೊಡದಿದ್ದರೆ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಮಾಡಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.