ಸೋಮವಾರ, ಮಾರ್ಚ್ 27, 2023
32 °C

ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2,000: ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಂದು ಕುಟುಂಬಗಳ ಯಜಮಾನಿಯರಿಗೆ ಮನೆ ನಿರ್ವಹಣೆಗಾಗಿ ತಿಂಗಳಿಗೆ ₹ 2,000 ನೆರವು ನೀಡುವ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೊಳಿಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ.

ಕೆಪಿಸಿಸಿ ವತಿಯಿಂದ ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಹಿಮಾಡಿದ ಚೆಕ್‌ ಮಾದರಿಯನ್ನು ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದರು.

2023ರ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಬೆಲೆ ಏರಿಕೆಯಿಂದ ಕುಟುಂಬ ನಿರ್ವಹಣೆಗೆ ಸಂಕಷ್ಟ ಉಂಟಾಗಿರುವ ಕುರಿತು ಸಾವಿರಾರು ಮಹಿಳೆಯರು ಪತ್ರದ ಮೂಲಕ ಅಭಿಪ್ರಾಯ ನೀಡಿದ್ದರು. ಅದನ್ನು ಆಧರಿಸಿ ‘ಗೃಹಲಕ್ಷ್ಮಿ’ ಯೋಜನೆ ಅನುಷ್ಠಾನದ ಭರವಸೆ ನೀಡಲಾಗಿದೆ. ಅದನ್ನು ಕಾರ್ಯರೂಪಕ್ಕೆ ತರುವ ಖಾತರಿಯನ್ನೂ ಪ್ರಿಯಾಂಕಾ ಅವರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಒಂದು ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ ₹ 2,000ದಂತೆ ವರ್ಷಕ್ಕೆ ₹ 24,000 ನೆರವು ನೀಡಲಾಗುವುದು. ರಾಜ್ಯದ 1.5 ಕೋಟಿ ಕುಟುಂಬಗಳಿಗೆ ಇದರಿಂದ ನೆರವಾಗಲಿದೆ ಎಂದು ಹೇಳಿದೆ.

ಇದೇ ಮಾದರಿಯಲ್ಲಿ ‘ಗೃಹಿಣಿ ಶಕ್ತಿ’ ಯೋಜನೆ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಹಿಂದೆ ಪ್ರಕಟಿಸಿದ್ದರು. ಕುಟುಂಬ ನಿರ್ವಹಣೆಗಾಗಿ ಪ್ರತಿ ಮನೆಯ ಒಬ್ಬ ಮಹಿಳೆಗೆ ತಿಂಗಳಿಗೆ ₹ 1,000ದಿಂದ ₹ 2,000ದವರೆಗೆ ಯೋಜನೆ ಜಾರಿಗೊಳಿಸುವುದಾಗಿ ತಿಳಿಸಿದ್ದರು.

‘ಪ್ರಿಯಾಂಕಾ ಗಾಂಧಿಯವರು ಗೃಹಲಕ್ಷ್ಮಿ ಯೋಜನೆ ಘೋಷಿಸುವ ಕುರಿತು ತಿಳಿದುಕೊಂಡು ರಾಜ್ಯ ಸರ್ಕಾರ ಮೊದಲೇ ಜಾಹೀರಾತು ನೀಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು