ಶನಿವಾರ, ಜನವರಿ 29, 2022
18 °C

ರಾಜ್ಯ ಚುನಾವಣಾ ಆಯೋಗವನ್ನು ಧಿಕ್ಕರಿಸಿರುವ ಬಿಜೆಪಿಗೆ ಸೋಲಿನ ಭಯ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ರಾಜ್ಯ ಚುನಾವಣಾ ಆಯೋಗವನ್ನು ಧಿಕ್ಕರಿಸಿ ಬಿಜೆಪಿ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸೀಮಾ ನಿರ್ಣಯ ಆಯೋಗವನ್ನು ರಚಿಸಿರುವುದಕ್ಕೆ ಚುನಾವಣೆಯಲ್ಲಿ ಸೋಲಿನ ಭಯವೇ ಕಾರಣ. ಸೋಲನ್ನು ಮುಂದೂಡಬಹುದೇ ವಿನಃ ಸೋಲಿನಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೊಳಿಸುವುದು ಸ್ವಾಯತ್ತ ಸ್ವರೂಪದ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಕೆಲಸ. ಪ್ರತ್ಯೇಕ ಆಯೋಗ ನೇಮಿಸಿದ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ಸರ್ವಾಧಿಕಾರಿ ಧೋರಣೆ ಬಯಲಾಗಿದೆ' ಎಂದಿದ್ದಾರೆ. #ಪಂಚಾಯತ್_ರಾಜ್ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

'ಅಧಿಕಾರ ವಿಕೇಂದ್ರಿಕರಣಕ್ಕಾಗಿ ರಚನೆಗೊಂಡ ಪಂಚಾಯತ್ ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ. ಇದಕ್ಕೆ ವಿರುದ್ಧವಾಗಿರುವ ಬಿಜೆಪಿ, ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಅನುದಾನವನ್ನು ಕಡಿತಗೊಳಿಸುವ ಮೂಲಕ ಅದನ್ನು ನಾಶಮಾಡಲು ಹೊರಟಿದೆ' ಎಂದು ದೂರಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ರಾಮ ಮನೋಹರ ಲೋಹಿಯಾ ಅವರು ದೇಶದ ಅಧಿಕಾರ ಗ್ರಾಮ, ಜಿಲ್ಲೆ, ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ಅವರ ಈ ಅಧಿಕಾರ ವಿಕೇಂದ್ರೀಕರಣ ತತ್ವದಲ್ಲಿ ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟಿದೆ. ಬಿಜೆಪಿ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ' ಎಂದಿದ್ದಾರೆ. 

'ಕಾಂಗ್ರೆಸ್ ಜಾರಿಗೊಳಿಸಿದ್ದ ನರೇಗಾ ಯೋಜನೆಯಿಂದಾಗಿ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಹರಿದು ಬಂದಿತ್ತು. ಕಳೆದ ಕೆಲವು ತಿಂಗಳುಗಳಿಂದ ನರೇಗಾ ಕೂಲಿಯನ್ನೇ ನೀಡಿಲ್ಲ. ಕೊರೊನಾ ಕಾಲದಲ್ಲಿ ನರೇಗಾ ಯೋಜನೆ ಇಲ್ಲದೆ ಹೋಗಿದ್ದರೆ ಜನ ಹಸಿವಿನಿಂದ ಸಾಯುತ್ತಿದ್ದರು. ಬಿಜೆಪಿ ಅದಕ್ಕೂ ಕಲ್ಲು ಹಾಕಲು ಹೊರಟಿದೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ನಾಶಗೊಳಿಸುವ ರಾಜ್ಯದ ಬಿಜೆಪಿ ಸರ್ಕಾರದ ಹುನ್ನಾರವನ್ನು ಹಿಮ್ಮೆಟ್ಟಿಸಬೇಕಾದರೆ ಪಕ್ಷಾತೀತವಾಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೆಲ್ಲರೂ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಆ ಪಕ್ಷವನ್ನು ಸೋಲಿಸುವ ದಿಟ್ಟ ನಿರ್ಧಾರ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು