ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? –ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

Last Updated 17 ಜೂನ್ 2022, 7:43 IST
ಅಕ್ಷರ ಗಾತ್ರ

ಬೆಂಗಳೂರು:ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರ ಸರ್ಕಾರ ಇದೀಗಯುವಜನರ ಬದುಕು ನಾಶ ಮಾಡಲು ಹೊರಟಿದೆ. ಜನರು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಮಂಗಳವಾರ (ಜೂನ್‌ 14) ಪ್ರಕಟಿಸಿರುವ ಸೈನಿಕರ ನೇಮಕಾತಿಯ ಹೊಸ ನೀತಿ 'ಅಗ್ನಿಪಥ್ ಯೋಜನೆ' ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಕೇಂದ್ರದ ನೀತಿಯನ್ನು ಟೀಕಿಸಿದ್ದಾರೆ.

'ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಸಬೇಕು.ರೈತರನ್ನು ಬಲಿಕೊಟ್ಟಾಯಿತು. ಈಗ ಸೈನಿಕರ ಸರದಿಯೇ?' ಎಂದು ಪ್ರಶ್ನಿಸಿದ್ದಾರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ,ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಎಂದು ಕೇಳಿದ್ದಾರೆ.

'ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ಎಂದು ಮತ್ತೊಂದು ಪ್ರಶ್ನೆ ಎಸೆದಿದ್ದಾರೆ.

ಕೇಂದ್ರದ ಬಿಜೆಪಿಸರ್ಕಾರವು,ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ದಿವಾಳಿಯಾಗಿದೆಯೇ? ಮೋದಿಯವರೇ, ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಎಂದು ಕುಟುಕಿದ್ದಾರೆ.

ಜನರುಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಕಿವಿಮಾತು ಹೇಳಿರುವ ಅವರು,ಹೊಸ ಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ ಎಂದು ಎಚ್ಚರಿಸಿದ್ದಾರೆ.

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.

ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರದಲ್ಲಿಪ್ರತಿಭಟನೆ ತೀವ್ರಗೊಂಡಿದೆ. ಇಂದು ಎರಡು ರೈಲುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.ಬಿಹಾರ ಮಾತ್ರವಲ್ಲದೆ,ಉತ್ತರ ಪ್ರದೇಶದ,ರಾಜಸ್ಥಾನ,ಹರಿಯಾಣದಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT