ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ‘ರಾಜಭವನ ಚಲೋ’: ಪೊಲೀಸರಿಂದ ತಡೆ

Last Updated 22 ಜುಲೈ 2021, 20:10 IST
ಅಕ್ಷರ ಗಾತ್ರ

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣ ಖಂಡಿಸಿ ಗುರುವಾರ ‘ರಾಜಭವನ ಚಲೋ’ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು ಮತ್ತು ಕಾರ್ಯಕರ್ತರನ್ನು ಅರ್ಧದಲ್ಲೇ ತಡೆದ ಪೊಲೀಸರು, ಅವರನ್ನು ವಶಕ್ಕೆ ಪಡೆದರು.

ವಿಧಾನಸೌಧದಲ್ಲಿರುವ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸಿದ್ದರಾಮಯ್ಯ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಕೆಲಹೊತ್ತು ಧರಣಿ ನಡೆಸಿದ ಮುಖಂಡರು, ಬಳಿಕ ಪಾದಯಾತ್ರೆಯಲ್ಲಿ ರಾಜಭವನದ ಕಡೆ ಹೊರಟರು. ಪ್ರತಿಭಟನಾಕಾರರು ತಿಮ್ಮಯ್ಯ ವೃತ್ತದ ಬಳಿಗೆ ತಲುಪುತ್ತಿದ್ದಂತೆ ಪೊಲೀಸರು ತಡೆದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ‘ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಪ್ರಜಾಪ್ರಭುತ್ವದ ಮೇಲಿನ ಅಪರಾಧ’ ಎಂದು ಆರೋಪಿಸಿದರು.

‘ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಪತನಗೊಳಿಸಿದ ವೇಳೆ ನನ್ನ ಆಪ್ತ ಸಹಾಯಕನ ದೂರವಾಣಿ ಕರೆಗಳನ್ನು ಕದ್ದಾಲಿಸಿದ್ದಾರೆ. ದೂರವಾಣಿ ಕದ್ದಾಲಿಕೆ ಜೊತೆಗೆ ದೂರವಾಣಿಯನ್ನು ಹ್ಯಾಕ್ ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ, ಜೆಡಿಎಸ್‌ ವರಿಷ್ಠ ದೇವೇಗೌಡ, ಎಚ್‌.ಡಿ. ಕುಮಾರಸ್ವಾಮಿ, ಅವರ ಆಪ್ತ ಸಹಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿವಿಧ ನ್ಯಾಯಾಧೀಶರ ದೂರವಾಣಿಯನ್ನೂ ಕದ್ದಾಲಿಸಲಾಗಿದೆ’ ಎಂದು ದೂರಿದರು.

‘ಪೆಗಾಸಸ್‌ ಎಂಬ ಏಜೆನ್ಸಿ ನಿಗದಿಪಡಿಸಿ ಕದ್ದಾಲಿಕೆಗೆ ನೂರಾರು ಕೋಟಿ ಖರ್ಚು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ಪ್ರಧಾನಿ ಹುದ್ದೆಯಲ್ಲಿ ಅವರು ನೈತಿಕವಾಗಿ ಮುಂದುವರಿಯಬಾರದು. ಸಂಸತ್ತಿನ ಉಭಯ ಸದನಗಳಲ್ಲಿ ಈ ವಿಚಾರ ಪ್ರಸ್ತಾಪಿಸಲು ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಎರಡೂ ಕಡೆ ಒತ್ತಡ ಹೇರಲಾಗುವುದು’ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್‌, ಶಾಸಕ ರಮೇಶ್‌ಕುಮಾರ್, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಹಿರಿಯ ಮುಖಂಡರಾದ ಅಲ್ಲಂ ವೀರಭದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT