ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಕಾಂಗ್ರೆಸ್‌ನಿಂದ ಪಾದಯಾತ್ರೆ

Last Updated 7 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಸಮಾನಾಂತರ ಅಣೆಕಟ್ಟೆ ನಿರ್ಮಾಣ ಯೋಜನೆ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಡಿಸೆಂಬರ್‌ ಮೊದಲ ವಾರ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ‘100 ಕಿ.ಮೀ. ಉದ್ದದ ಪಾದಯಾತ್ರೆಯಲ್ಲಿ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದರು.

‘ಕಾವೇರಿ ನ್ಯಾಯಾಧೀಕರಣದ ಐತೀರ್ಪಿನ ಪ್ರಕಾರ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರು ಹರಿದು ಸಮುದ್ರ ಸೇರುತ್ತಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಬೇಕು ಎಂಬುದು ನಮ್ಮ ಬೇಡಿಕೆ. ಡಿಸೆಂಬರ್‌ ಮೊದಲ ವಾರ ಪಾದಯಾತ್ರೆ ಆರಂಭವಾಗಲಿದೆ. ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಾಗುವುದು’ ಎಂದು ಶಿವಕುಮಾರ್‌ ಹೇಳಿದರು.

ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಕೆ ಮಾಡಲು, ರಾಜ್ಯದ ಹಣದಲ್ಲಿ ಅಣೆಕಟ್ಟೆ ನಿರ್ಮಿಸುವ ಯೋಜನೆ ಇದೆ. ಇದಕ್ಕೆ ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಇದೇ ಮಾತು ಹೇಳಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಿಗೆ ಅನುಕೂಲವಾಗಲಿರುವ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಹೋರಾಟ ನಡೆಸಲಿದೆ ಎಂದರು.

ರಾಜಕೀಯ ಕಾರಣಕ್ಕೆ ವಿರೋಧ:‘ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ. ಈ ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಆಗುವುದಿಲ್ಲ. ಅಲ್ಲಿ ನೀರಿನ ಅಭಾವ ಎದುರಾದಾಗ ಅನುಕೂಲವೇ ಆಗಲಿದೆ. ಕಾನೂನಿನ ತೊಡಕುಗಳಿಲ್ಲದ ಈ ಯೋಜನೆಯನ್ನು ರಾಜ್ಯ ಸರ್ಕಾರ ತಕ್ಷಣ ಆರಂಭಿಸಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಈ ಯೋಜನೆಗೆ ಯಾವುದೇ ನ್ಯಾಯಾಲಯದ ತಕರಾರುಗಳಿಲ್ಲ. ಕಾನೂನಿನ ಬೆಂಬಲವೂ ಇದೆ. ಕೇಂದ್ರ ಪರಿಸರ ಇಲಾಖೆಯು ತಕ್ಷಣವೇ ಯೋಜನೆಗೆ ಅನುಮತಿ ಪತ್ರ ನೀಡಬೇಕು. ರಾಜ್ಯ ಸರ್ಕಾರ ವಿಳಂಬ ಮಾಡದೆ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದರು.

ಚುನಾವಣೆ ಅಥವಾ ಮತ ಗಳಿಕೆ ಉದ್ದೇಶದಿಂದ ಕಾಂಗ್ರೆಸ್‌ ಪಾದಯಾತ್ರೆ ನಡೆಸುವುದಿಲ್ಲ. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಯೋಜನೆಯ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಒಪ್ಪಿಗೆ ನೀಡದ ಕಾರಣದಿಂದ ಅನುಷ್ಠಾನ ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.

‘ನಾನು ಭಾರತದ ಪರ’ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನಾವು ಕನ್ನಡಿಗರು ಮತ್ತು ಕರ್ನಾಟಕದ ಪರ ಇದ್ದೇವೆ. ಮೇಕೆದಾಟು ಯೋಜನೆ ಶೀಘ್ರದಲ್ಲಿ ಜಾರಿಯಾಗಬೇಕು ಎಂಬುದು ನಮ್ಮ ಬೇಡಿಕೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT