ಶುಕ್ರವಾರ, ಫೆಬ್ರವರಿ 3, 2023
18 °C

₹6 ಸಾವಿರ ಕೋಟಿ ಬಾಕಿ ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಸರ್ಕಾರ ₹6 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದೆ. ಇದರಲ್ಲಿ ಉತ್ತರ ಕರ್ನಾಟಕದ ಗುತ್ತಿಗೆದಾರರ ಪಾಲು ₹3 ಸಾವಿರ ಕೋಟಿಯಾಗಿದ್ದು, ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಸ ಪಾಟೀಲ ಆಗ್ರಹಿಸಿದರು.

‘ಸಣ್ಣ ನೀರಾವರಿ, ಲೋಕೋಪಯೋಗಿ, ಬೃಹತ್ ನೀರಾವರಿ, ಜಿಲ್ಲಾ ಪಂಚಾಯ್ತಿ ಹೀಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆದಾರರ ಹಣ ಕೋಟಿಗಟ್ಟಲೇ ಬಾಕಿ ಇದ್ದು, ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ಗುತ್ತಿಗೆದಾರರು ಟೆಂಡರ್‌ಗಳಲ್ಲಿ ಸರ್ಕಾರ ನಿಗದಿಪಡಿಸಿದ ಎಸ್‌ಆರ್ ದರಕ್ಕಿಂತ ಶೇ 5ಕ್ಕಿಂತ ಹೆಚ್ಚಿನ ದರಗಳನ್ನು ನಮೂದಿಸಿದಲ್ಲಿ ಅದನ್ನು ಸರ್ಕಾರಕ್ಕೆ ಕಳುಹಿಸುವ ನಿಯಮವಿದೆ. ಈ ನಿಯಮ ಬದಲಿಸಿ ಮೊದಲಿನ ನಿಯಮ ಜಾರಿಗೆ ತರಬೇಕು. ಇಂತಹ ಚಿಕ್ಕಪುಟ್ಟ ಬದಲಾವಣೆ ಮಾಡಲು ವಲಯ ಕಾರ್ಯನಿರ್ವಾಹಕ ಎಂಜಿನಿಯರ್ ಮಟ್ಟದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರವನ್ನು ವಿಕೇಂದ್ರೀಕರಿಸಬೇಕು’ ಎಂದು ಪಾಟೀಲ ಒತ್ತಾಯಿಸಿದರು.

‘ರಾಜ್ಯದಾದ್ಯಂತ ಕ್ರಷರ್ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು. ವಿವಿಧ ಕಾಮಗಾರಿಗಳಿಗೆ ಅಗತ್ಯವಿರುವ ಜಲ್ಲಿಕಲ್ಲು ಸಿಗುವಂತೆ ಮಾಡಬೇಕು. ಒಂದು ವಾರದೊಳಗೆ ಬೇಡಿಕೆ ಈಡೇರದಿದ್ದರೆ ಜನಪ್ರತಿನಿಧಿಗಳ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು