ಸೋಮವಾರ, ಅಕ್ಟೋಬರ್ 25, 2021
25 °C
ಭ್ರಷ್ಟಾಚಾರ ಆರೋಪ

ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತು ಆಂತರಿಕ ತನಿಖೆ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಸೋಮವಾರ ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ನಸೀರ್‌ ಅಹ್ಮದ್ ಅವರು ಈ ಬಗ್ಗೆ ವಿಷಯ ಪ್ರಸ್ತಾಪಿಸಿ, ಅರಣ್ಯ ವೀಕ್ಷಕ, ಅರಣ್ಯ ರಕ್ಷಕ, ಉಪವಲಯ ಅರಣ್ಯಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಆರೋಪಗಳಿವೆ ಎಂದು ಹೇಳಿದರು.

ಈ ಅಕ್ರಮಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಅಧಿಕಾರಿಗಳೇ ಪ್ರಭಾವಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಇದರಿಂದ, ಸಾಕ್ಷ ನಾಶ ಮಾಡಬಹುದು. ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕತ್ತಿ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು ಜುಲೈ 27ರಂದು ಪತ್ರ ಬರೆದು ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರನ್ನು ಕೋರಿದ್ದಾರೆ. ಆದರೆ, ಇಲಾಖೆಯ ಜಾಗೃತ ದಳಕ್ಕೆ ಪ್ರಾಥಮಿಕ ತನಿಖೆ ನಡೆಸುವಂತೆ ಈಗಾಗಲೇ ಆದೇಶಿಸಲಾಗಿದೆ. 15 ದಿನಗಳಲ್ಲಿ ಈ ವರದಿ ಲಭ್ಯವಾಗಲಿದೆ. ವರದಿ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಿರುವುದು ಕಂಡು ಬಂದಲ್ಲಿ ತಕ್ಷಣವೇ ಅಮಾನತು ಮಾಡಲಾಗುವುದು ಎಂದು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು