ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: 7.24 ಲಕ್ಷ ಮಂದಿಗೆ ಲಸಿಕೆ

Last Updated 23 ಫೆಬ್ರುವರಿ 2021, 16:34 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 27,260 ಮಂದಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದಾಗಿ ಈವರೆಗೆ ಲಸಿಕೆ ಪ‍ಡೆದವರ ಸಂಖ್ಯೆ 7 ಲಕ್ಷದ ಗಡಿ (7.24 ಲಕ್ಷ) ದಾಟಿದೆ.

ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯಲು 58,741 ಮಂದಿಯನ್ನು ಗುರುತಿಸಲಾಗಿತ್ತು. ಅವರಲ್ಲಿ ಶೇ 46ರಷ್ಟು ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಲ್ಲಿಯೂ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಲಸಿಕೆ ವಿತರಣೆ ಪ್ರಾರಂಭವಾದಾಗಿನಿಂದ ಈವರೆಗೆ ನಿಗದಿಪಡಿಸಲಾಗಿದ್ದ 7,28,349 ಆರೋಗ್ಯ ಕಾರ್ಯಕರ್ತರಲ್ಲಿ 4,33,496 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದರಿಂದ ಶೇ 60 ರಷ್ಟು ಗುರಿ ಸಾಧ್ಯವಾಗಿದೆ. ಇವರಲ್ಲಿ 1.54 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 2,91,037 ಮುಂಚೂಣಿ ಯೋಧರನ್ನು ಈವರೆಗೆ ಲಸಿಕೆ ಪಡೆಯಲು ಗುರುತಿಸಲಾಗಿತ್ತು. ಅವರಲ್ಲಿ 1,36,188 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದ ಶೇ 47ರಷ್ಟು ಗುರಿ ಸಾಧ್ಯವಾಗಿದೆ.

383 ಮಂದಿಗೆ ಸೋಂಕು: ರಾಜ್ಯದಲ್ಲಿ ಹೊಸದಾಗಿ 383 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.48 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,303ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 378 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.30 ಲಕ್ಷ ದಾಟಿದೆ. 6,062 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 122 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಬೆಂಗಳೂರಿನಲ್ಲಿ 240 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.04 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 26 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,967ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ 18, ದಕ್ಷಿಣ ಕನ್ನಡದಲ್ಲಿ 17, ತುಮಕೂರು ಹಾಗೂ ಉಡುಪಿಯಲ್ಲಿ ತಲಾ 12, ಬೆಳಗಾವಿಯಲ್ಲಿ 10 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT