ಶುಕ್ರವಾರ, ಮಾರ್ಚ್ 24, 2023
22 °C
4.12 ಲಕ್ಷ ದಾಟಿದ ಸೋಂಕಿತರ ಸಂಖ್ಯೆ l ಮೃತರ ಸಂಖ್ಯೆ 6,680ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್‌ಗೆ ಮತ್ತೆ 146 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಮತ್ತೆ 146 ಮಂದಿ ಮೃತಪಟ್ಟಿರುವುದು ಮಂಗಳವಾರ ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್‌ಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 6,680ಕ್ಕೆ ಏರಿಕೆಯಾಗಿದೆ.

ಈ ತಿಂಗಳ 8 ದಿನಗಳಲ್ಲಿ 978 ಮಂದಿ ಮೃತಪಟ್ಟಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 122 ಮಂದಿ ಮರಣ ಹೊಂದಿರುವುದು ದೃಢಪಟ್ಟಿದೆ. ‌ರಾಜ್ಯದಲ್ಲಿ ಹೊಸದಾಗಿ 7,866 ಮಂದಿ ಕೋವಿಡ್ ಪೀಡಿತರಾಗಿರುವುದು ಖಚಿತಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.12 ಲಕ್ಷ ದಾಟಿದೆ. ಕೋವಿಡ್‌ ಪರೀಕ್ಷೆಗಳ ಸಂಖ್ಯೆಯನ್ನು ಮತ್ತೆ ಇಳಿಕೆ ಮಾಡಲಾಗಿದೆ. ಹೀಗಾಗಿ ಹೊಸದಾಗಿ ವರದಿಯಾಗುವ ಪ್ರಕರಣಗಳ ಸಂಖ್ಯೆ ಕೂಡ ಎರಡು ದಿನಗಳಿಂದ 8 ಸಾವಿರದ ಗಡಿಯ ಆಸುಪಾಸಿನಲ್ಲಿದೆ. ಸದ್ಯ ಸೋಂಕು ದೃಢ ಪ್ರಮಾಣ ಶೇ 11.91ರಷ್ಟಿದೆ.

ರಾಜ್ಯದಲ್ಲಿ ಮಂಗಳವಾರ 38,291 ಆ್ಯಂಟಿಜೆನ್‌ ಸೇರಿದಂತೆ 67,443 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆಗೆ ಒಳಪಟ್ಟವರ ಸಂಖ್ಯೆ 34.61 ಲಕ್ಷ ತಲುಪಿದೆ. ಬೆಂಗಳೂರಿನಲ್ಲಿ 2,330 ಮಂದಿ ಸೇರಿದಂತೆ ರಾಜ್ಯದಲ್ಲಿ ಮತ್ತೆ 7,803 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 3.08 ಲಕ್ಷ ತಲುಪಿದೆ. 96 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು, ಕೋವಿಡ್‌ ಆರೈಕೆ ಕೇಂದ್ರಗಳು ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,102 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.53 ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಮತ್ತೆ 404 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24 ಸಾವಿರಕ್ಕೆ ತಲುಪಿದೆ. ದಕ್ಷಿಣ ಕನ್ನಡ (374), ಮೈಸೂರು (337), ಧಾರವಾಡ (318) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು