ಸೋಮವಾರ, ಸೆಪ್ಟೆಂಬರ್ 27, 2021
26 °C
ಹೈಕೋರ್ಟ್‌ಗೆ ಕಾನೂನು ಸೇವಾ ಪ್ರಾಧಿಕಾರದ ವರದಿ

ಸೇವಾ ಸಿಂಧು ಕೇಂದ್ರ: ಕಮಿಷನ್ ಹಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ₹ 2,000 ಕೋವಿಡ್‌ ಪರಿಹಾರ ಪಡೆಯವುದಕ್ಕೆ ಅರ್ಜಿ ಸಲ್ಲಿಸಲು ಬರುವ ಅಸಂಘಟಿತ ವಲಯದ ಕಾರ್ಮಿಕರಿಂದ ರಾಜ್ಯದ ಬಹುತೇಕ ಸೇವಾ ಸಿಂಧು ಕೇಂದ್ರಗಳಲ್ಲಿ ‘ಕಮಿಷನ್‌ ಶುಲ್ಕ’ದ ಹೆಸರಿನಲ್ಲಿ ₹ 150ರಿಂದ ₹ 250ರವರೆಗೂ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಇರಲಿ ಅಥವಾ ಅರ್ಜಿಗಳು ನೋಂದಣಿಗೆ ಬಾಕಿ ಇರಲಿ, ಎಲ್ಲ ಮನೆಗೆಲಸದ ಕಾರ್ಮಿಕರಿಗೂ ಕೋವಿಡ್‌ಪರಿಹಾರ ಪಾವತಿಗೆ ಆದೇಶಿಸಬೇಕು ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮಂಗಳವಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ನಡೆಯಿತು. ಆಗ ಪ್ರಾಧಿಕಾರವು ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತು.

ವರದಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ವರದಿಯು ಕಾರ್ಮಿಕ ಇಲಾಖೆಯ ಕಣ್ತೆರೆಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿತು.

‘ಸೇವಾ ಸಿಂಧು ಕೇಂದ್ರಗಳಲ್ಲಿ ಕಮಿಷನ್‌ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ಕುರಿತು ಪ್ರಾಧಿಕಾರಕ್ಕೆ ಹಲವು ದೂರುಗಳು ಬಂದಿವೆ. ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಹಾಸನ, ರಾಮನಗರ, ಬೀದರ್‌ ಮತ್ತು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳಿಗೆ ಈ ಕುರಿತು ವಿಚಾರಣೆ ನಡೆಸಿ, ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಅವರು ನೀಡಿರುವ ಮಾಹಿತಿ ಆಧರಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಲು ನೆರವಾಗುವುದಕ್ಕೆ ಕಾರ್ಮಿಕ ಇಲಾಖೆಯು ಸೂಕ್ತವಾದ ವ್ಯವಸ್ಥೆಯೊಂದನ್ನು ರೂಪಿಸಬೇಕು’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಖುದ್ದು ಹಾಜರಿಗೆ ಸೂಚನೆ: ಗುರುವಾರ ಪ್ರಕರಣದ ಮುಂದಿನ ವಿಚಾರಣೆ ನಡೆಯುವಾಗ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಿರುವಂತೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗೆ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

‘₹ 2,000ದಂತಹ ಸಣ್ಣ ಮೊತ್ತ ಪಡೆಯಲು ಕಾರ್ಮಿಕರು ಎಷ್ಟು ಕಷ್ಟ ಪಡಬೇಕಿದೆ ಎಂಬುದನ್ನು ವರದಿ ತೆರೆದಿಟ್ಟಿದೆ. ನೋಂದಣಿ ಪ್ರಕ್ರಿಯೆ ಕ್ಲಿಷ್ಟಕರವಾಗಿರುವುದೂ ಉಲ್ಲೇಖವಾಗಿದೆ. ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಸೌಲಭ್ಯ ವಂಚಿತರಾಗುವ ಅಪಾಯವಿದೆ. ಇತರ ಕ್ಷೇತ್ರಗಳ ಅಸಂಘಟಿತ ಕಾರ್ಮಿಕರ ನೋಂದಣಿಯಲ್ಲಿ ಇರುವ ಸಮಸ್ಯೆಗಳನ್ನೂ ವರದಿ ವಿವರಿಸಿದೆ’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು