ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 9 ಬ್ರಿಟನ್‌ ವಲಸಿಗರಿಗೆ ಸೋಂಕು

ಆರ್‌ಟಿ–ಪಿಸಿಆರ್ ಪರೀಕ್ಷೆ
Last Updated 26 ಡಿಸೆಂಬರ್ 2020, 18:46 IST
ಅಕ್ಷರ ಗಾತ್ರ

ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರ ಪೈಕಿ ಮತ್ತೆ 9 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಅಲ್ಲಿಂದ ಮರಳಿದವರಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಇಂಗ್ಲೆಂಡಿನಿಂದ ಇಲ್ಲಿಗೆ ಬಂದವರಲ್ಲಿ 15 ಮಂದಿಗೆ ಆರ್‌ಟಿ–ಪಿಸಿಆರ್ ಪರೀಕ್ಷೆಯನ್ನು ಶನಿವಾರ ನಡೆಸಲಾಗಿದೆ. ಅದರಲ್ಲಿ 6 ಮಂದಿಯ ಪರೀಕ್ಷೆಯ ಫಲಿತಾಂಶ ಬಂದಿಲ್ಲ. ಅಲ್ಲಿಂದ ಬಂದವರಲ್ಲಿ ಈವರೆಗೆ ಒಟ್ಟು 1,434 ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ 908 ಮಂದಿಗೆ ಸೋಂಕು ತಗುಲಿಲ್ಲ ಎನ್ನುವುದು ವರದಿಯಿಂದ ದೃಢಪಟ್ಟಿದೆ. ಇನ್ನೂ 503 ಮಂದಿ ಪರೀಕ್ಷೆಯ ವರದಿಗೆ ಎದುರು ನೋಡುತ್ತಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 857 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.15 ಲಕ್ಷ ದಾಟಿದೆ. ಈ ತಿಂಗಳ 26 ದಿನಗಳಲ್ಲಿ 30,449 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,171 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ 7 ಮಂದಿ ಮೃತಪಟ್ಟಿದ್ದು. ಸಾವಿಗೀಡಾದವರ ಸಂಖ್ಯೆ 12,051ಕ್ಕೆ ತಲುಪಿದೆ.

ಒಂದೇ ದಿನ 90 ಸಾವಿರ ಆರ್‌ಟಿ–ಪಿಸಿಆರ್ ಸೇರಿದಂತೆ 95 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.36 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕೋವಿಡ್ ಪೀಡಿತರಲ್ಲಿ 964 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.89 ಲಕ್ಷಕ್ಕೆ ತಲುಪಿದೆ.

205 ಮಂದಿ ಐಸಿಯುನಲ್ಲಿ: ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 13,394 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 205 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 77 ಸಾವಿರ ನೇರ ಸಂಪರ್ಕಿತರು ಹಾಗೂ 87 ಸಾವಿರ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ 471 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.86 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 62 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,186ಕ್ಕೆ ತಲುಪಿದೆ. ದಕ್ಷಿಣ ಕನ್ನಡದಲ್ಲಿ 34, ತುಮಕೂರಿನಲ್ಲಿ 32, ಶಿವಮೊಗ್ಗದಲ್ಲಿ 31, ಚಿಕ್ಕಬಳ್ಳಾಪುರದಲ್ಲಿ 25 ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ರಾಜ್ಯದ 26 ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT