ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19: ರಾಜ್ಯದಲ್ಲಿ 25 ಸಾವಿರದತ್ತ ಸಕ್ರಿಯ ಪ್ರಕರಣ

Last Updated 4 ಆಗಸ್ಟ್ 2021, 15:29 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 1,769 ಮಂದಿ ಕೋವಿಡ್ ಪೀಡಿತರಾಗಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 25 ಸಾವಿರ (24,305) ಸಮೀಪಿಸಿದೆ.

ಎರಡು ವಾರದಿಂದ ಗುಣಮುಖರ ಸಂಖ್ಯೆಗಿಂತ ಹೊಸ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ಇದರಿಂದ ಸಕ್ರಿಯ ಪ್ರಕರಣಗಳು ಹೆಚ್ಚಳವಾಗಿವೆ. ಒಂದು ದಿನದ ಅವಧಿಯಲ್ಲಿ 1.69 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಶೇ 1.04ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ.

ರಾಜ್ಯದ 13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ಹಾಗೂ 10 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಯಾದಗಿರಿ ಹಾಗೂ ಹಾವೇರಿಯಲ್ಲಿ ಹೊಸದಾಗಿ ಪ್ರಕರಣ ವರದಿಯಾಗಿಲ್ಲ. ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 350, ಮೈಸೂರಿನಲ್ಲಿ 143 ಹಾಗೂ ಕೊಡಗಿನಲ್ಲಿ 99 ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ 411 ಮಂದಿ ಹಾಗೂ ಉಡುಪಿಯಲ್ಲಿ 140 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100ರ ಗಡಿಯೊಳಗೆ ವರದಿಯಾಗಿವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 29.11 ಲಕ್ಷ ದಾಟಿದೆ. ಕೊರೊನಾ ಸೋಂಕಿತರಲ್ಲಿ 1,714 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 28.50 ಲಕ್ಷ ದಾಟಿದೆ.

ಕೋವಿಡ್ ಪೀಡಿತರಲ್ಲಿ 30 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 13 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ 6, ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ 4, ಮಂಡ್ಯದಲ್ಲಿ 3, ವಿಜಯಪುರ, ಉಡುಪಿ, ಕೋಲಾರ ಹಾಗೂ ಹಾಸನದಲ್ಲಿ ತಲಾ ಇಬ್ಬರು ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಮರಣ ಪ್ರಮಾಣ ದರವು ಶೇ 1.69ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 36,680ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT