ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ಪ್ರಯಾಣಿಕರು: ನೆಗೆಟಿವ್ ವರದಿ ಕಡ್ಡಾಯ

Last Updated 16 ಫೆಬ್ರುವರಿ 2021, 21:50 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶಗಳಿಂದ ಇಲ್ಲಿಗೆ ಬರುವವರು ಕೋವಿಡ್‌ ಆರ್‌ಟಿ–ಪಿಸಿಆರ್ ಪರೀಕ್ಷೆಯ ನೆಗೆಟಿವ್‌ ವರದಿ ತರಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಕೂಡ ಕೊರೊನಾ ರೂಪಾಂತರ ವೈರಾಣು ಕಾಣಿಸಿಕೊಂಡ ಕಾರಣ ಅಲ್ಲಿಂದ ಬರುವವರು ಸೋಂಕಿತರಾಗಿರದ ಬಗ್ಗೆ ಆರ್‌ಟಿ–ಪಿಸಿಆರ್ ಪರೀಕ್ಷೆ ವರದಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅವರಿಗೆ ಇಲ್ಲಿನ ವಿಮಾನ ನಿಲ್ದಾಣಗಳಲ್ಲಿ ಕೂಡ ಆರ್‌ಟಿ–ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಸೋಂಕಿತರಾದಲ್ಲಿ ಅವರನ್ನು 14 ದಿನಗಳು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿ, ಮಾದರಿಯನ್ನು ಜಿನೋಮ್‍ ಸೀಕ್ವೆನ್ಸಿಂಗ್ ಪರೀಕ್ಷೆಗೆ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಸೋಂಕಿತರಾಗಿರದವರು 14 ದಿನಗಳು ಮನೆ ಕ್ವಾರಂಟೈನ್‌ಗೆ ಒಳಪಡಬೇಕು. 7ನೇ ದಿನಕ್ಕೆ ಮತ್ತೊಮ್ಮೆ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

438 ಮಂದಿಗೆ ಸೋಂಕು: ರಾಜ್ಯದಲ್ಲಿ ಮಂಗಳವಾರ 438 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 9.46 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ನಾಲ್ಕು ಮಂದಿ ಹಾಗೂ ಮೈಸೂರಿನಲ್ಲಿ ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಪೀಡಿತರಲ್ಲಿ ಮತ್ತೆ 344 ಮಂದಿ ಗುಣಮುಖರಾಗಿದ್ದಾರೆ.

5,860 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 125 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಬೆಂಗಳೂರಿನಲ್ಲಿ 306 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.02 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 12 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,805ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ 19, ಚಿತ್ರದುರ್ಗ ಹಾಗೂ ಉಡುಪಿಯಲ್ಲಿ ತಲಾ 11 ಪ್ರಕರಣಗಳು ವರದಿಯಾಗಿವೆ.

ಕೇರಳದಿಂದ ಬರುವವರಿಗೆ ‘ನೆಗೆಟಿವ್‌’ ವರದಿ ಕಡ್ಡಾಯ
ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವವರು 72 ಗಂಟೆಗಳಿಗಿಂತ ಈಚೆಗೆ ಆರ್‌ಟಿ–ಪಿಸಿಆರ್‌ ಪರೀಕ್ಷೆಯಲ್ಲಿ ಪಡೆದ ‘ಕೋವಿಡ್‌ ನೆಗೆಟಿವ್‌’ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲ ಜನರ ಮೇಲೆ ವಿಶೇಷ ನಿಗಾ ಇಡುವಂತೆಯೂ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಸುತ್ತೋಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹೋಟೆಲ್‌, ರೆಸಾರ್ಟ್‌, ಹಾಸ್ಟೆಲ್‌, ಹೋಂ ಸ್ಟೇಗಳು ಮತ್ತಿತರ ಕಡೆಗಳಲ್ಲಿ ಕೇರಳದಿಂದ ಹಿಂದಿರುಗಿರುವವರಿಗೆ ಪ್ರವೇಶ ನೀಡುವ ಮುನ್ನ ‘ಕೋವಿಡ್‌ ನೆಗೆಟಿವ್‌’ ವರದಿಯನ್ನು ಖಾತರಿಪಡಿಸಿಕೊಳ್ಳುವುದು ಕಡ್ಡಾಯ. ಕೇರಳದಿಂದ ಬರುವ ವಿದ್ಯಾರ್ಥಿಗಳ ಮಾಹಿತಿಯನ್ನು ಕಾಲೇಜು ಮತ್ತು ಹಾಸ್ಟೆಲ್‌ಗಳ ಪ್ರತಿನಿಧಿಗಳು ಸಕ್ಷಮ ಪ್ರಾಧಿಕಾರದ ಜತೆ ಹಂಚಿಕೊಳ್ಳಬೇಕು. ನೋಡಲ್‌ ಅಧಿಕಾರಿಯ ಅನುಮತಿ ಇಲ್ಲದೆ ಪೋಷಕರ ಭೇಟಿಗೆ ಅವಕಾಶ ಕಲ್ಪಿಸುವಂತಿಲ್ಲ. ಊಟದ ಕೊಠಡಿಯಲ್ಲಿ ದಟ್ಟಣೆ ತಡೆಯಲು ಊಟದ ಅವಧಿಯನ್ನು ವಿಸ್ತರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕೇರಳದಿಂದ ಶಾಲಾ, ಕಾಲೇಜುಗಳಿಗೆ ನಿತ್ಯ ಪ್ರಯಾಣ ಮಾಡುವವರು ಪ್ರತಿ 15 ದಿನಗಳಿಗೊಮ್ಮೆ ‘ಕೋವಿಡ್‌ ನೆಗೆಟಿವ್‌’ ವರದಿ ಹಾಜರುಪಡಿಸಬೇಕು. ಕಳೆದ ಎರಡು ವಾರದ ಅವಧಿಯಲ್ಲಿ ಕೇರಳದಿಂದ ರಾಜ್ಯಕ್ಕೆ ಬಂದಿರುವವರು (72 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೊಳಗಾದವರ ಹೊರತಾಗಿ) ಆರ್‌ಟಿ– ಪಿಸಿಆರ್‌ ಮಾದರಿಯಲ್ಲಿ ಕೋವಿಡ್‌ ಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ. ಈ ಸೂಚನೆ ಉಲ್ಲಂಘಿಸಿದವರನ್ನು ತಕ್ಷಣವೇ ಕ್ವಾರಂಟೈನ್‌ನಲ್ಲಿ ಇರಿಸಬೇಕು. ನೆಗೆಟಿವ್‌ ವರದಿ ಲಭ್ಯವಾದ ಬಳಿಕವೇ ಹೊರಹೋಗಲು ಅನುಮತಿ ನೀಡಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT