ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಪರೀಕ್ಷೆಗಳ ಸಂಖ್ಯೆ ಇಳಿಕೆ

Last Updated 25 ಜನವರಿ 2021, 19:10 IST
ಅಕ್ಷರ ಗಾತ್ರ

ಬೆಂಗಳೂರು: ಈ ತಿಂಗಳು ದಿನವೊಂದಕ್ಕೆ 1.30 ಲಕ್ಷ ದಾಟಿದ್ದ ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಎರಡು ವಾರದಿಂದ ಇಳಿಕೆ ಕಂಡಿದ್ದು, ಮಂಗಳವಾರ 59,427 ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಕೋವಿಡ್‌ ಎರಡನೇ ಅಲೆಯ ಸಾಧ್ಯತೆ ಕಾರಣ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ಪ್ರತಿನಿತ್ಯ 1.20 ಲಕ್ಷ ಪರೀಕ್ಷೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು. ಆದರೆ, ಪರೀಕ್ಷೆಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಈ ತಿಂಗಳು 25 ದಿನಗಳಲ್ಲಿ 24.30 ಲಕ್ಷ ಮಂದಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈವರೆಗೆ ರಾಜ್ಯದಲ್ಲಿ 1.66 ಕೋಟಿ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 375 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.36 ಲಕ್ಷ ದಾಟಿದೆ. ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,200ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 1,036 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.17 ಲಕ್ಷಕ್ಕೆ ತಲುಪಿದೆ. ಸದ್ಯ 6,846 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 152 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಬೆಂಗಳೂರಿನಲ್ಲಿ 200 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.97 ಲಕ್ಷಕ್ಕೆ ತಲುಪಿದೆ. ಮೈಸೂರಿನಲ್ಲಿ ಮತ್ತೆ 27 ಪ್ರಕರಣಗಳು ವರದಿಯಾಗಿವೆ. ಅಲ್ಲಿ ಸೋಂಕಿತರ ಸಂಖ್ಯೆ 53,256ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಬ್ಬರು ಹಾಗೂ ಮೈಸೂರಿನಲ್ಲಿ ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

2.23 ಲಕ್ಷ ಮಂದಿಗೆ ಲಸಿಕೆ

ರಾಜ್ಯದಲ್ಲಿ ಕೇವಲ ಹತ್ತು ದಿನಗಳಲ್ಲಿ 2.23 ಲಕ್ಷ ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದಾಗಿ ದೇಶದಲ್ಲಿಯೇ ಕರ್ನಾಟಕವು ಅತೀ ಹೆಚ್ಚು ಮಂದಿಗೆ ಲಸಿಕೆ ವಿತರಿಸಿದ ರಾಜ್ಯ ಎಂಬ ಗೌರವಕ್ಕೆ ಭಾಜನವಾಗಿದೆ. ‌

ಸೋಮವಾರ 1,099 ಕೇಂದ್ರಗಳಿಂದ 85,422 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 32,277 ಮಂದಿ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ನಿಗದಿಪಡಿಸಿದ ಫಲಾನುಭವಿಗಳಲ್ಲಿ ಶೇ 38 ರಷ್ಟು ಮಂದಿ ಮಾತ್ರ ಹಾಜರಾಗಿದ್ದು, ಉಳಿದವರು ನಾನಾ ಕಾರಣಗಳಿಂದ ಗೈರಾಗಿದ್ದಾರೆ. ಧಾರವಾಡ, ಬೆಂಗಳೂರು ಸೇರಿದಂತೆ 21 ಜಿಲ್ಲೆಗಳಲ್ಲಿ ಅರ್ಧಕ್ಕೂ ಅಧಿಕ ಮಂದಿ ಲಸಿಕೆ ಪಡೆದುಕೊಳ್ಳಲು ಬರಲಿಲ್ಲ. ಲಸಿಕೆ ಪಡೆದವರಲ್ಲಿ ಯಾರಲ್ಲಿಯೂ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ಮಂತ್ರಿಗಳಿಗೆ ಕೋವಿಡ್ ಲಸಿಕೆ’

‘ದೇಶದಲ್ಲಿಯೇ ಅತಿ ಹೆಚ್ಚು ಮಂದಿಗೆ ಲಸಿಕೆ ವಿತರಿಸಿದ ರಾಜ್ಯ ಕರ್ನಾಟಕ. ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ‍ಪರಿಣಾಮಗಳು ಕಾಣಿಸಿಕೊಂಡಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆಯಾಗಿದೆ. ಹೆಚ್ಚು ಜನರು ಇದನ್ನು ಪಡೆದುಕೊಳ್ಳಬೇಕು. ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಮುಖ್ಯ ಮಂತ್ರಿ, ಸಚಿವರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಅದೇ ರೀತಿ, ಸುಮಾರು 500 ಮಂದಿ ಜನಪ್ರಿಯ ವ್ಯಕ್ತಿಗಳಿಗೆ ಲಸಿಕೆ ನೀಡಲು ಕ್ರಮ ವಹಿಸಲು ಪ್ರಧಾನಿ ಅವರಿಗೆ ಮನವಿ ಮಾಡಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT