ಶುಕ್ರವಾರ, ಡಿಸೆಂಬರ್ 4, 2020
22 °C

ಕೋವಿಡ್: ರಾಜ್ಯದಲ್ಲಿ 40,395 ಸೋಂಕಿತರಿಗೆ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 20 ದಿನಗಳಿಂದ ಕೋವಿಡ್ ಗುಣಮುಖರ ಸಂಖ್ಯೆಯು ಹೊಸ ಸೋಂಕಿನ ಪ್ರಕರಣಗಳನ್ನು ಮೀರಿಸಿದೆ. ಇದರಿಂದಾಗಿ, ಸದ್ಯ 40,395 (ಸಕ್ರಿಯ ಪ್ರಕರಣಗಳು) ಕೊರೊನಾ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ಕಳೆದ ತಿಂಗಳ ಬಹುತೇಕ ದಿನಗಳಲ್ಲಿ ಸಕ್ರಿಯ ಪ್ರಕರಣಗಳು ಲಕ್ಷದ ಗಡಿಯ ಆಸುಪಾಸಿನಲ್ಲಿತ್ತು. ಬಳಿಕ ಹೊಸ ಪ್ರಕರಣಗಳು ಹಾಗೂ ಗುಣಮುಖರ ಸಂಖ್ಯೆಯ ನಡುವೆ ಅಂತರ ಹೆಚ್ಚಿದ್ದರಿಂದಾಗಿ ಸಕ್ರಿಯ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡಿವೆ. ರಾಜ್ಯದಲ್ಲಿ ಮಂಗಳವಾರ 2,756 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 8.32 ಲಕ್ಷಕ್ಕೆ ಏರಿಕೆಯಾಗಿದೆ. 

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 13 ಮಂದಿ ಸೇರಿದಂತೆ ರಾಜ್ಯದಲ್ಲಿ 26 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,247ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 4,868 ಮಂದಿ ಸೇರಿದಂತೆ ರಾಜ್ಯದಲ್ಲಿ 7,140 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 7.80 ಲಕ್ಷ ದಾಟಿದೆ.

ಸೋಂಕಿತರಲ್ಲಿ ಸದ್ಯ 932 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಂದೇ ದಿನ 94 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 81.85 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕಳೆದ 7 ದಿನಗಳ ಅವಧಿಯಲ್ಲಿ 54,475 ಮಂದಿಯನ್ನು ಮನೆ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿ 1,479 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.41 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 125 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 48 ಸಾವಿರ ದಾಟಿದೆ. ದಕ್ಷಿಣ ಕನ್ನಡದಲ್ಲಿ (123), ತುಮಕೂರು (108) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು