ಗುರುವಾರ , ಮೇ 26, 2022
28 °C

ಕೋವಿಡ್ ಲಸಿಕೆ: 16 ಮಂದಿಗೆ ಅಡ್ಡ ಪರಿಣಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಬುಧವಾರ 28,756 ಮಂದಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ ಕೊಪ್ಪಳದ 35 ವರ್ಷದ ಮಹಿಳೆಯೊಬ್ಬರಿಗೆ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ. ಇದರಿಂದಾಗಿ ಈವರೆ ತೀವ್ರ ಮತ್ತು ಗಂಭೀರ ಸ್ವರೂಪದ ಅಡ್ಡ ಪರಿಣಾಮ ಎದುರಿಸಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಇವರಲ್ಲಿ ಮೂವರು ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಚೇತರಿಸಿಕೊಂಡಿದ್ದಾರೆ. ಅಡ್ಡ ಪರಿಣಾಮ ಎದುರಿಸಿದವರಲ್ಲಿ ಎಲ್ಲರೂ ‘ಕೋವಿಶೀಲ್ಡ್’ ಲಸಿಕೆ ಪಡೆದವರಾಗಿದ್ದಾರೆ. ಉಸಿರಾಟದ ಸಮಸ್ಯೆ, ಎದೆನೋವು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸಿದ್ದಾರೆ. ಹಾಗಂತ, ಕೋವಿಡ್‌ ಲಸಿಕೆಯ ಬಗ್ಗೆ ಆತಂಕ ಪಡಬೇಕಿಲ್ಲ. ಇದು ಸುರಕ್ಷಿತವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಬುಧವಾರ ಲಸಿಕೆ ಪಡೆಯಲು 79,703 ಮಂದಿಯನ್ನು ಗುರುತಿಸಲಾಗಿತ್ತು. ಅವರಲ್ಲಿ ಶೇ 36ರಷ್ಟು ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಉಳಿದವರು ಹಿಂಜರಿಕೆ ಸೇರಿದಂತೆ ನಾನಾ ಕಾರಣಗಳಿಂದ ಗೈರಾಗಿದ್ದಾರೆ. ರಾಜ್ಯದಲ್ಲಿ ಲಸಿಕೆ ವಿತರಣೆ ಪ್ರಾರಂಭವಾದಾಗಿನಿಂದ ಈವರೆಗೆ ನಿಗದಿಪಡಿಸಲಾಗಿದ್ದ 8,21,939 ಆರೋಗ್ಯ ಕಾರ್ಯಕರ್ತರಲ್ಲಿ 4,14,551 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದರಿಂದ ಶೇ 50ರಷ್ಟು ಗುರಿ ಸಾಧ್ಯವಾಗಿದೆ. ಇವರಲ್ಲಿ 52,608 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

2,84,950 ಮುಂಚೂಣಿ ಯೋಧರನ್ನು ಈವರೆಗೆ ಲಸಿಕೆ ಪಡೆಯಲು ಗುರುತಿಸಲಾಗಿತ್ತು. ಅವರಲ್ಲಿ 96,055 ಮಂದಿ ಹಾಜರಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಇದರಿಂದ ಶೇ 34ರಷ್ಟು ಗುರಿ ಸಾಧ್ಯವಾಗಿದೆ.

378 ಮಂದಿಗೆ ಸೋಂಕು
ರಾಜ್ಯದಲ್ಲಿ ಬುಧವಾರ 378 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 9.46 ಲಕ್ಷ ದಾಟಿದೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಮೂವರು ಮೃತಪಟ್ಟಿರುವುದು ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,276ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 537 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.28 ಲಕ್ಷ ದಾಟಿದೆ.

5,698 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 124ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಬೆಂಗಳೂರಿನಲ್ಲಿ 253 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.02 ಲಕ್ಷ ದಾಟಿದೆ.

ಮೈಸೂರಿನಲ್ಲಿ ಮತ್ತೆ 17 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 53,822ಕ್ಕೆ ಏರಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು