ಬುಧವಾರ, ಮೇ 18, 2022
23 °C

ಬ್ರಿಟನ್ ವಲಸಿಗರು: ಸೋಂಕಿತರ ಸಂಖ್ಯೆ 59ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರಲ್ಲಿ ಮತ್ತೊಬ್ಬರು ಕೋವಿಡ್ ಪೀಡಿತರಾಗಿದ್ದಾರೆ. ಇದರಿಂದಾಗಿ ಅಲ್ಲಿಂದ ಬಂದವರಲ್ಲಿ ಸೋಂಕಿತರಾದವರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

ಬ್ರಿಟನ್‌ನಿಂದ ಇಲ್ಲಿಗೆ ಶುಕ್ರವಾರ 323 ಮಂದಿ ಬಂದಿದ್ದಾರೆ. ಕಳೆದ ನ.25ರ ಬಳಿಕ ಬಂದವರ ಸಂಖ್ಯೆ 9,392ಕ್ಕೆ ತಲುಪಿದೆ. ಇವರಲ್ಲಿ 21 ಮಂದಿಯಲ್ಲಿ ರೂಪಾಂತರ ವೈರಾಣು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಹೊಸದಾಗಿ 430 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.41 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಹಾಗೂ ಧಾರವಾಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,230ಕ್ಕೆ ತಲುಪಿದೆ. 

ಕೋವಿಡ್ ಪೀಡಿತರಲ್ಲಿ ಮತ್ತೆ 470 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.23 ಲಕ್ಷ ದಾಟಿದೆ. 5,874 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 144 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಒಂದೇ ದಿನ 74 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ 1.73 ಕೋಟಿ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 217 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4 ಲಕ್ಷದ ಗಡಿಯತ್ತ (3,99,997) ದಾಪುಗಾಲು ಇರಿಸಿದೆ. ತುಮಕೂರಿನಲ್ಲಿ 35, ಉಡುಪಿಯಲ್ಲಿ 21, ಕಲಬುರ್ಗಿಯಲ್ಲಿ 20, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 17 ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು