ಸೋಮವಾರ, ಮೇ 23, 2022
21 °C

ಕೋವಿಡ್: ನಿಯಮಿತ ಪರೀಕ್ಷೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಸಕ್ರಿಯ ಪ್ರಕರಣಗಳ ಮೇಲೆ ನಿಗಾ ಇರಿಸಿ, ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ದೈನಂದಿನ ಕೋವೀಡ್ ಪ್ರಕರಣಗಳ ಸರಾಸರಿ ಸಂಖ್ಯೆ 200ರ ಆಸುಪಾಸಿನಲ್ಲಿದೆ. ಸೋಂಕು ದೃಢ ಪ್ರಮಾಣ ಶೇ 1ರ ಗಡಿಯೊಳಗಡೆ ಇದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಸಕ್ರಿಯ ಪ್ರಕರಣಗಳ ಮೇಲೆ ನಿಯಮಿತವಾಗಿ ನಿಗಾ ಇಡಬೇಕು. ಪ್ರಕರಣಗಳು ಪತ್ತೆಯಾಗುತ್ತಿರುವ ಸ್ಥಳಗಳಲ್ಲಿ ಸೋಂಕು ಶಂಕಿತರ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲ್ಲೂಕು ಆಸ್ಪತ್ರೆಗಳು ಕೋವಿಡ್ ಪರೀಕ್ಷೆಗೆ ಮಾದರಿಗಳನ್ನು ಸಂಗ್ರಹಿಸಲು ಆದ್ಯತೆ ನೀಡಬೇಕು. ಪ್ರತಿನಿತ್ಯ 50 ಮತ್ತು 25 ಮಾದರಿಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಪರೀಕ್ಷಿಸಬೇಕು. ಹೊಸ ರೂಪಾಂತರಿ ಪತ್ತೆ ಹಚ್ಚಲು ವೈರಾಣು ಅನುಕ್ರಮಣಿಕೆ ಪರೀಕ್ಷೆಗೆ (ಜೀನೋಮ್‌ ಸೀಕ್ವೆನ್ಸಿಂಗ್‌) ಮಾದರಿಗಳನ್ನು ಕಳುಹಿಸಬೇಕು ಎಂದು ಹೇಳಲಾಗಿದೆ. 

ಬಿಬಿಎಂಪಿ ಹಾಗೂ ಜಿಲ್ಲಾಡಳಿತ ನಿಗದಿಪಡಿಸಿದ ಕೋವಿಡ್ ಪರೀಕ್ಷೆಯ ದೈನಂದಿನ ಗುರಿ ತಲುಪಬೇಕು. ಕೋವಿಡ್‌ಗೆ ಸಂಬಂಧಿಸಿದ ದೈನಂದಿನ ಕ್ರೋಡೀಕೃತ ಮಾಹಿತಿಯನ್ನು ರಾಜ್ಯ ಕಣ್ಗಾವಲು ಘಟಕಕ್ಕೆ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.