ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾದ ಹೊಸ ತಳಿ 'ಓಮಿಕ್ರಾನ್‌' ಭೀತಿ: ಕೇರಳ, ‘ಮಹಾ’ ಗಡಿಯಲ್ಲಿ ಕಟ್ಟೆಚ್ಚರ

ಶಾಲಾ, ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಿರ್ಬಂಧ?
Last Updated 27 ನವೆಂಬರ್ 2021, 15:59 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾದ ಹೊಸ ತಳಿಯ ಓಮಿಕ್ರಾನ್‌ ವೈರಾಣು ಜಗತ್ತಿನ ಬೇರೆ ರಾಷ್ಟ್ರಗಳಲ್ಲಿ ಹರಡುತ್ತಿರುವ ಬೆನ್ನಲ್ಲೇ, ಕೋವಿಡ್‌ ಹರಡುವಿಕೆ ತಡೆಯಲು ಮುಂದಾಗಿರುವ ರಾಜ್ಯ ಸರ್ಕಾರ, ನೆರೆಯ ಕೇರಳ, ಮಹಾರಾಷ್ಟ್ರ ರಾಜ್ಯಗಳ ಗಡಿಗಳಲ್ಲಿ ಕಟ್ಟೆಚ್ಚರ ಘೋಷಿಸಿದೆ.

ಎರಡೂ ರಾಜ್ಯಗಳಿಂದ ಬರುವವರಿಗೆ ಆರ್‌ಟಿ–ಪಿಸಿಆರ್‌ ವಿಧಾನದಡಿ ಪಡೆದ ‘ಕೋವಿಡ್‌ ನೆಗೆಟಿವ್‌’ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ಕೆಲವು ಸಚಿವರು, ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಹಿರಿಯ ಅಧಿಕಾರಿಗಳು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ, ತಜ್ಞರ ಸಮಿತಿ ಸದಸ್ಯರ ಜತೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ, ಕೋವಿಡ್‌ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಪ್ರಕಟಿಸಿದರು.

ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗಳಲ್ಲಿ ತನಿಖಾ ಠಾಣೆಗಳನ್ನು ತೆರೆಯಲಾಗುವುದು. ಅಲ್ಲಿ, ಕಂದಾಯ, ಪೊಲೀಸ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯನ್ನೊಳಗೊಂಡ ತಂಡಗಳು ಸರದಿಯ ಮೇಲೆ 24 ಗಂಟೆಗಳ ಕಾಲ ನಿರಂತರವಾಗಿ ಕೆಲಸ ಮಾಡಲಿದ್ದಾರೆ. ದಿಢೀರ್‌ ಭೇಟಿನೀಡಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ. ಈ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಜರುಗಿಸುತ್ತಾರೆ ಎಂದು ಹೇಳಿದರು.

ನೆಗೆಟಿವ್‌ ವರದಿ ಕಡ್ಡಾಯ:16 ದಿನಗಳ ಹಿಂದೆ ಕೇರಳದಿಂದ ಬಂದಿರುವವರು ಮತ್ತೊಮ್ಮೆ ಆರ್‌ಟಿ–ಪಿಸಿಆರ್‌ ವಿಧಾನದಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಅಶೋಕ ತಿಳಿಸಿದರು.

ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳು ನೆಗೆಟಿವ್‌ ವರದಿ ಬಂದ ಏಳು ದಿನಗಳ ಬಳಿಕ ಪುನಃ ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯಕೀಯ ಶಿಕ್ಷಣ ಕಾಲೇಜು ಮತ್ತು ನರ್ಸಿಂಗ್‌ ಕಾಲೇಜುಗಳಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದರು.

ಶಾಲಾ, ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ಸಲಹಾ ರೂಪದ ಸುತ್ತೋಲೆ ನೀಡಲಾಗುವುದು. ಅಗತ್ಯ ಕಂಡುಬಂದಲ್ಲಿ ಕಾರ್ಯಕ್ರಮ ನಿರ್ಬಂಧಿಸಿ ಆದೇಶವನ್ನೂ ಹೊರಡಿಸಲಾಗುವುದು ಎಂದು ಹೇಳಿದರು.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು. ಸೋಂಕು ಪತ್ತೆಯಾದವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಮುಂದಿನ ಸಭೆಯಲ್ಲಿ ನಿರ್ಧಾರ: ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಅವಕಾಶ ನೀಡುವ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಮತ್ತೊಮ್ಮೆ ಸಭೆ ನಡೆಸಿ ಈ ಕುರಿತು ನಿರ್ಧಾರಕ್ಕೆ ಬರಲಾಗುವುದು. ಕೋವಿಡ್‌ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಾರದಿದ್ದರೆ ಇನ್ನಷ್ಟು ಬಿಗಿ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಎರಡು ಡೋಸ್‌ ಲಸಿಕೆ ಕಡ್ಡಾಯ
ಸರ್ಕಾರಿ ಕಚೇರಿಗಳು, ಮಾಲ್‌ಗಳು, ಚಿತ್ರಮಂದಿರಗಳು, ಹೋಟೆಲ್‌, ರೆಸ್ಟೋರಂಟ್‌, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯ ಮತ್ತು ಜೈವಿಕ ಉದ್ಯಾನಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಎರಡು ಡೋಸ್‌ ಲಸಿಕೆ ತೆಗೆದುಕೊಳ್ಳದೇ ಇದ್ದರೆ, ಅಂತಹವರಿಗೆ ಪ್ರವೇಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್‌. ಅಶೋಕ ತಿಳಿಸಿದರು.

ಕೋವಿಡ್‌ ನಿಯಂತ್ರಣದ ಮುಂಚೂಣಿ ಸಿಬ್ಬಂದಿಗೆ ‘ಬೂಸ್ಟರ್‌ ಡೋಸ್‌’ ನೀಡಲು ಕೇಂದ್ರ ಸರ್ಕಾರದ ಅನುಮತಿ ಕೋರಿದ್ದು, ಒಪ್ಪಿಗೆ ಕೊಟ್ಟರೆ ಮುಂದಿನ ವಾರದಿಂದಲೇ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT