ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಮೂರನೇ ಅಲೆ: ರಾಜ್ಯದಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ತುತ್ತಾಗುವ ಸಾಧ್ಯತೆ

ಡಾ.ದೇವಿ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ
Last Updated 20 ಜೂನ್ 2021, 3:34 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮೂರನೇ ಅಲೆಯಿಂದಾಗಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ತಿಳಿಸಿದೆ.

16 ಸದಸ್ಯರನ್ನು ಒಳಗೊಂಡ ತಜ್ಞರ ಸಮಿತಿಯು ಕೋವಿಡ್ ಸಾಂಕ್ರಾಮಿಕದ ಸಂಭವನೀಯ ಮೂರನೇ ಅಲೆಯನ್ನು ಎದುರಿಸಲು ಹಲವಾರು ಕ್ರಮಗಳನ್ನು ಶಿಫಾರಸು ಮಾಡಿದೆ. ಜತೆಗೆ, ಸೋಂಕು ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಶನಿವಾರ ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ಉಲ್ಲೇಖಿಸಿದೆ.

91 ಪುಟಗಳ ಮಧ್ಯಂತರ ವರದಿಯಲ್ಲಿ ‘0-18 ವರ್ಷ ವಿಭಾಗದಲ್ಲಿ 32.21 ಲಕ್ಷ ಜನಸಂಖ್ಯೆ ಹೊಂದಿರುವ ಬೆಂಗಳೂರಿನಲ್ಲಿ ಮೂರನೇ ಅಲೆಯಿಂದಾಗಿ 45,958 ಮಕ್ಕಳು ಸೋಂಕಿಗೆ ತುತ್ತಾಗಲಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 2.2 ರಷ್ಟು ಜನರು ಸೋಂಕಿಗೆ ಒಳಗಾಗುತ್ತಾರೆ’ ಎಂದು ಅಂದಾಜಿಸಲಾಗಿದೆ.

ರಾಜ್ಯದಲ್ಲಿ ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಿನಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣಿಸುವ ಸಾಧ್ಯತೆ ಇದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಹೇಳಿದೆ.

ಬೆಂಗಳೂರಿನಲ್ಲಿ ಮಕ್ಕಳಿಗೆ 3,677 ಹಾಸಿಗೆಗಳ ಅವಶ್ಯಕತೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ, ಅದರಲ್ಲಿ 1,838 ಹಾಸಿಗೆಗಳು ಐಸಿಯು ಮತ್ತು ಎಚ್‌ಡಿಯು (ಹೈ ಡಿಪೆಂಡೆನ್ಸಿ ಯುನಿಟ್) ಆಗಿರುತ್ತವೆ. ಹೆಚ್ಚುವರಿಯಾಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 7,353 ಹಾಸಿಗೆಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ.

ರಾಜ್ಯದಾದ್ಯಂತ 0-18 ವರ್ಷ ವಯಸ್ಸಿನ 2.38 ಕೋಟಿ ಜನಸಂಖ್ಯೆಯಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ಒಳಗಾಗುತ್ತಾರೆ ಎಂದು ಅಂದಾಜಿಸಲಾಗಿದೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 27,205 ಹಾಸಿಗೆಗಳು, 13,602 ಐಸಿಯು ಹಾಗೂ 54,409 ಎಚ್‌ಡಿಯು ಹಾಸಿಗೆಗಳು ಬೇಕಾಗುತ್ತವೆ ಎಂದು ಹೇಳಲಾಗಿದೆ.

‌ವರದಿಯಲ್ಲಿ ಬಾಲ ಅರೈಕೆ ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಸಹ ಶಿಫಾರಸು ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ‘ತಜ್ಞರ ಸಮಿತಿ ಅಂತಿಮ ವರದಿ ಆಧರಿಸಿ 45 ದಿನಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT