ಬುಧವಾರ, ಮಾರ್ಚ್ 22, 2023
19 °C

ಕೋವಿಡ್: ಶೇ 40.06ರಷ್ಟು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿರುವ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ 40.06 ಮಂದಿಗೆ ಈವರೆಗೆ (ಜುಲೈ 3) ಕೋವಿಡ್‌ ಲಸಿಕೆ ಹಾಕಲಾಗಿದೆ. ಈ ಕಾಲೇಜುಗಳ ಸಿಬ್ಬಂದಿಯ ಪೈಕಿ ಶೇ 59.79 ಮಂದಿಗೆ ಲಸಿಕೆ ನೀಡಲಾಗಿದೆ.

‘ಎಲ್ಲ ಆರು ವಲಯಗಳಲ್ಲಿರುವ (ಬೆಂಗಳೂರು, ಮೈಸೂರು, ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ಕಲಬುರ್ಗಿ) ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. ಈವರೆಗೆ ಉತ್ತಮ ಸಾಧನೆ ಮಾಡಲಾಗಿದ್ದು, ಮುಂದಿನ 3–4 ದಿನಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಒಟ್ಟು 4,90,799 ವಿದ್ಯಾರ್ಥಿಗಳ ಪೈಕಿ ಈವರೆಗೆ 1,96,614 ಮಂದಿಗೆ ಲಸಿಕೆ ಹಾಕಲಾಗಿದೆ. ಎಲ್ಲ ಆರೂ ವಲಯಗಳಲ್ಲಿ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಅದರಲ್ಲೂ ಧಾರವಾಡ (ಶೇ 70.99) ಮತ್ತು ಶಿವಮೊಗ್ಗ (ಶೇ 50.38) ವಲಯದ ವಿದ್ಯಾರ್ಥಿಗಳು ಲಸಿಕೆ ಪಡೆದ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಒಟ್ಟು 29,241 ಸಿಬ್ಬಂದಿ ಪೈಕಿ 17,484 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಈವರೆಗೆ ಲಸಿಕೆ ಪಡೆದಿರುವ ಸಿಬ್ಬಂದಿಯ ಪಟ್ಟಿಯಲ್ಲಿ ಅನುದಾನಿತ ಕಾಲೇಜುಗಳ ಸಿಬ್ಬಂದಿ ಮುಂದಿದ್ದಾರೆ. ಧಾರವಾಡ ವಲಯದಲ್ಲಿ ಶೇ 90.32ರಷ್ಟು, ಕಲಬುರ್ಗಿ ವಲಯದಲ್ಲಿ ಶೇ 78.76ರಷ್ಟು ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಮಂಗಳೂರು ವಲಯದ ಸರ್ಕಾರಿ ಕಾಲೇಜುಗಳ ಸಿಬ್ಬಂದಿಯ ಪೈಕಿ ಶೇ 79.22ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ.

‘ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಈವರೆಗೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ, ಲಸಿಕೀಕರಣ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ. ಸದ್ಯ ಆನ್‌ಲೈನ್‌ ತರಗತಿಗಳು ನಡೆಯುತ್ತಿದೆ’ ಎಂದೂ ಅಧಿಕಾರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು