ಭಾನುವಾರ, ಜೂನ್ 20, 2021
29 °C
ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿರುವ ಆರೋಗ್ಯ ಇಲಾಖೆ *ಏಪ್ರಿಲ್ ಮೊದಲ ವಾರದಲ್ಲಿ ಪ್ರಾರಂಭ ಸಾಧ್ಯತೆ

ಆರೋಗ್ಯ ಉಪ ಕೇಂದ್ರಗಳಲ್ಲೇ ಕೋವಿಡ್ ಲಸಿಕೆ

ವರುಣ ಹೆಗಡೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಆರೋಗ್ಯ ಕೇಂದ್ರಗಳಿಗೆ ತೆರಳಿ, ಕೋವಿಡ್ ಲಸಿಕೆ ಪಡೆಯುವುದು ಹಿರಿಯ ನಾಗರಿಕರು ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಸವಾಲಾಗಿದೆ. ಹೀಗಾಗಿ, ರಾಜ್ಯದ 8,871 ಆರೋಗ್ಯ ಉಪ ಕೇಂದ್ರಗಳನ್ನೇ ಕೋವಿಡ್ ಲಸಿಕೆ ಕೇಂದ್ರಗಳನ್ನಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿದೆ. 

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ ಲಸಿಕೆ ವಿತರಣೆ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಆರೋಗ್ಯ ಇಲಾಖೆಯು ದಿನವೊಂದಕ್ಕೆ 3 ಲಕ್ಷ ಮಂದಿಗೆ ಲಸಿಕೆ ವಿತರಿಸುವ ಗುರಿಯನ್ನು ಹಾಕಿಕೊಂಡಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಸದ್ಯ 3,500ಕ್ಕೂ ಅಧಿಕ ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ಪಡೆಯಲು ಹಿರಿಯ ನಾಗರಿಕರು ಹಾಗೂ ಕೋವಿಡೇತರ ಕಾಯಿಲೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಎಲ್ಲ ಉಪ ಕೇಂದ್ರಗಳಲ್ಲಿ ಹಂತ ಹಂತವಾಗಿ ಲಸಿಕೆ ವಿತರಣೆಗೆ ಆರೋಗ್ಯ ಇಲಾಖೆ ತಯಾರಿ ನಡೆಸಿದೆ.

ದಟ್ಟಣೆ ನಿವಾರಣೆ: ಕೇಂದ್ರ ಸರ್ಕಾರದ ಸೂಚನೆ ಅನುಸಾರ ರಾಜ್ಯದಲ್ಲಿಯೂ ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಣೆ  ಪ್ರಾರಂಭವಾಗಲಿದೆ. ಹೀಗಾಗಿ, ಸದ್ಯ ಇರುವ ಆರೋಗ್ಯ ಕೇಂದ್ರಗಳಲ್ಲಿ ದಟ್ಟಣೆ ಹೆಚ್ಚಿ, ‌ಹಿರಿಯ ನಾಗರಿಕರಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಕೂಡ ಆರೋಗ್ಯ ಉಪ ಕೇಂದ್ರಗಳನ್ನು ಲಸಿಕೆ ವಿತರಣೆಗೆ ಬಳಸಿಕೊಳ್ಳಲಾಗುತ್ತಿದೆ. 

‘ಹೊರರೋಗಿಗಳಿಗೆ ಸೇವೆ ಒದಗಿಸುವ ಆರೋಗ್ಯ ಉಪ ಕೇಂದ್ರಗಳು 3 ಸಾವಿರದಿಂದ 5 ಸಾವಿರ ಜನಸಂಖ್ಯೆಗೆ ಒಂದರಂತೆ ಕಾರ್ಯನಿರ್ವಹಿಸುತ್ತಿದೆ. ಸಾರಿಗೆ ಸಮಸ್ಯೆಯಿಂದಲೇ ಬಹುತೇಕ ಹಿರಿಯ ನಾಗರಿಕರು ಲಸಿಕೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಆರೋಗ್ಯ ಉಪ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಪ್ರಾರಂಭಿಸಿದ ಬಳಿಕ ನಾವು ಹಾಕಿಕೊಂಡ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು