ಶುಕ್ರವಾರ, ಡಿಸೆಂಬರ್ 3, 2021
20 °C

ಕರ್ನಾಟಕದಲ್ಲಿ 2 ಕೋಟಿ ಮಂದಿಗೆ ತಲಾ 2 ಡೋಸ್ ಕೋವಿಡ್‌ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರ ಸಂಖ್ಯೆ 2 ಕೋಟಿ ಗಡಿ ದಾಟಿದೆ.

ಈವರೆಗೆ 6.08 ಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು ವಿತರಿಸಲಾಗಿದೆ. 4.08 ಕೋಟಿ ಮಂದಿ ಮೊದಲ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ದಕ್ಷಿಣ ಭಾರತದಲ್ಲಿ ಅತೀ ಹೆಚ್ಚು ಡೋಸ್‌ಗಳನ್ನು ವಿತರಿಸಿದ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಈ ವರ್ಷದ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. 

ಕಳೆದ ಜ.16 ರಿಂದ ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಪ್ರಾರಂಭಿಕ ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ಮುಂಚೂಣಿ ಯೋಧರಿಗೆ ಆದ್ಯತೆ ನೀಡಿ, ಲಸಿಕೆ ಒದಗಿಸಲಾಗಿತ್ತು. ಬಳಿಕ ವಯೋಮಿತಿ ಅನುಸಾರ 18 ವರ್ಷಗಳು ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಣೆಯನ್ನು ಪ್ರಾರಂಭಿಸಲಾಗಿತ್ತು. ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳುತ್ತಿದ್ದಂತೆ ದಿನವೊಂದಕ್ಕೆ ವಿತರಿಸಲಾಗುತ್ತಿದ್ದ ಡೋಸ್‌ಗಳ ಸಂಖ್ಯೆಯನ್ನು 2.5 ಲಕ್ಷಕ್ಕೆ ಏರಿಕೆ ಮಾಡಲಾಗಿತ್ತು.

ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸಂಭಾವ್ಯ ಮೂರನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿದ್ದರಿಂದ ಸರ್ಕಾರವು ಲಸಿಕಾ ಮೇಳಗಳನ್ನು ರಾಜ್ಯದ ವಿವಿಧೆಡೆ ನಡೆಸಿ, ಲಸಿಕೆಯನ್ನು ವಿತರಿಸಿತ್ತು. ಕೆಲ ದಿನಗಳಿಂದ ದಿನವೊಂದಕ್ಕೆ ಸರಾಸರಿ 5 ಲಕ್ಷ ಡೋಸ್‌ಗಳನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಇದರಿಂದಾಗಿ ಗುರುತಿಸಲಾದ ಫಲಾನುಭವಿಗಳಲ್ಲಿ ಶೇ 84 ರಷ್ಟು ಮಂದಿ ಮೊದಲ ಡೋಸ್ ಹಾಗೂ ಶೇ 39ರಷ್ಟು ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಕೋವಿಶೀಲ್ಡ್‌ಗೆ ಆದ್ಯತೆ: ರಾಜ್ಯದಲ್ಲಿ ಕೋವಿಶೀಲ್ಡ್‌ ಲಸಿಕೆಗೆ ಆದ್ಯತೆ ನೀಡಲಾಗಿದ್ದು, ಈವರೆಗೆ 5.37 ಕೋಟಿ ಡೋಸ್‌ಗಳಷ್ಟು ಈ ಲಸಿಕೆಯನ್ನು ವಿತರಿಸಲಾಗಿದೆ. 70.81 ಲಕ್ಷ ಡೋಸ್‌ಗಳಷ್ಟು ಕೋವ್ಯಾಕ್ಸಿನ್‌ ಲಸಿಕೆಯನ್ನು ನೀಡಲಾಗಿದೆ. ಸದ್ಯ 3 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.

18 ರಿಂದ 44 ವರ್ಷದವರಲ್ಲಿ 2.26 ಕೋಟಿ ಮಂದಿ ಮೊದಲ ಡೋಸ್ ಹಾಗೂ 80.66 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.64 ಕೋಟಿ ಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 1.05 ಕೋಟಿ ಮಂದಿ ಎರಡೂ ಡೋಸ್ ಪೂರ್ಣಗೊಳಿಸಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ 7.63 ಲಕ್ಷ ಹಾಗೂ ಕೋವಿಡ್ ಮುಂಚೂಣಿ ಯೋಧರಲ್ಲಿ 9.92 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 6.71 ಲಕ್ಷ ಮಂದಿ ಹಾಗೂ 7.75 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.