ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಿಗೆ 1.5 ಕೋಟಿ ಡೋಸ್‌ ಲಸಿಕೆ ಕೊಡಿ: ಪ್ರಧಾನಿ ಮೋದಿ ಮುಂದೆ ಬಿಎಸ್‌ವೈ ಬೇಡಿಕೆ

Last Updated 16 ಜುಲೈ 2021, 20:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಲಸಿಕೆಯ ಅಭಾವ ತೀವ್ರವಾಗಿದ್ದು, ಪ್ರತಿ ತಿಂಗಳು ಕನಿಷ್ಠ 1.5 ಕೋಟಿ ಡೋಸ್‌ಗಳಷ್ಟು ಲಸಿಕೆ ಪೂರೈಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಡಿಕೆ ಸಲ್ಲಿಸಿದರು.

ಕೋವಿಡ್‌–19 ನಿಯಂತ್ರಣ ಕುರಿತು ಪ್ರಧಾನಿ ಶುಕ್ರವಾರ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಅವರು, ‘ಈವರೆಗೆ ರಾಜ್ಯದಲ್ಲಿ 2.62 ಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಿತ್ಯ ಐದು ಲಕ್ಷ ಡೋಸ್‌ಗಳಂತೆ ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್‌ ಲಸಿಕೆಯನ್ನು ರಾಜ್ಯಕ್ಕೆ ಹಂಚಿಕೆ ಮಾಡಬೇಕು’ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆಯ ಇಳಿಮುಖವಾಗಿದೆ. ಈಗ ದಿನಕ್ಕೆ ಸರಾಸರಿ 1,900 ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ಬೆಂಗಳೂರಿನಲ್ಲಿ ನಿತ್ಯ 400 ಪ್ರಕರಣಗಳು ಮಾತ್ರ ವರದಿಯಾಗುತ್ತಿವೆ. ರಾಜ್ಯದಲ್ಲಿ ಪ್ರಕರಣಗಳ ದೃಢಪ್ರಮಾಣ ದರ ಶೇ 1.42 ಮತ್ತು ಮರಣ ಪ್ರಮಾಣ ಶೇ 1.25ಕ್ಕೆ ಇಳಿದಿದೆ ಎಂದು ಪ್ರಧಾನಿಗೆ ಮಾಹಿತಿ ನೀಡಿದರು.

ಕೋವಿಡ್‌ ಮೂರನೇ ಅಲೆ ಎದುರಿಸಲು ಕರ್ನಾಟಕ ಸಂಪೂರ್ಣವಾಗಿ ಸಜ್ಜಾಗಿದೆ. ಎಲ್ಲ ಹಂತದ ಆಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್‌ಗಳನ್ನು ಮೇಲ್ದರ್ಜೆಗೇರಿಸಿದ್ದು, ಆಮ್ಲಜನಕ ಸಹಿತ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ವೈದ್ಯರು, ಶುಶ್ರೂಷಕರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಒದಗಿಸಲಾಗಿದೆ. ಆಸ್ಪತ್ರೆಗಳಿಗೆ ಅಗತ್ಯ ಯಂತ್ರೋಪಕರಣಗಳನ್ನೂ ಪೂರೈಸಲಾಗಿದೆ. ಹೊಸ ಆರ್‌ಟಿ–ಪಿಸಿಆರ್‌ ಮತ್ತು ‘ಜೆನೋಮ್‌ ಸೀಕ್ವೆನ್ಸಿಂಗ್‌’ ಪ್ರಯೋಗಾಲಯಗಳನ್ನು ಆರಂಭಿಸಲಾಗುತ್ತಿದೆ ಎಂದು ಯಡಿಯೂರಪ್ಪ ವಿವರಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಎಂ. ಕಾರಜೋಳ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಉಪಸ್ಥಿತರಿದ್ದರು.

ನವಜಾತ ಶಿಶುಗಳಿಗೆ 800 ವೆಂಟಿಲೇಟರ್ ಕೊಡಿ:

‘ನವಜಾತ ಶಿಶುಗಳ ಆರೈಕೆಗೆ ಬಳಸುವ (ನಿಯೋನೇಟಲ್‌) 800 ವೆಂಟಿಲೇಟರ್‌ಗಳನ್ನು ಪಿಎಂ–ಕೇರ್ಸ್‌ ಅಡಿಯಲ್ಲಿ ತುರ್ತಾಗಿ ರಾಜ್ಯಕ್ಕೆ ಒದಗಿಸಿ’ ಎಂಬ ಬೇಡಿಕೆಯನ್ನೂ ಯಡಿಯೂರಪ್ಪ ಸಲ್ಲಿಸಿದರು.

ತಾಲ್ಲೂಕು ಆಸ್ಪತ್ರೆಗಳಲ್ಲಿ ಬಳಸುವುದಕ್ಕಾಗಿ 40 ಪಿಎಸ್‌ಎ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಒದಗಿಸಬೇಕು. ದ್ರವರೂಪದ ವೈದ್ಯಕೀಯ ಆಮ್ಲಜನಕದ ವಿತರಣೆಯನ್ನು ವಿಕೇಂದ್ರೀಕರಣ ಮಾಡಬೇಕು. ಕಪ್ಪು ಶಿಲೀಂಧ್ರ ಸೋಂಕಿತರ ಚಿಕಿತ್ಸೆಗಾಗಿ ಆ್ಯಂಪೋಟೆರಿಸಿನ್‌– ಬಿ ಮತ್ತು ಮಕ್ಕಳಿಗಾಗಿ ಇಂಟ್ರಾವೀನಸ್‌ ಇಮ್ಯುನೋಗ್ಲೋಬಿನ್ (ಐವಿಐಜಿ) ಚುಚ್ಚುಮದ್ದುಗಳನ್ನು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT