ಸೋಮವಾರ, ಏಪ್ರಿಲ್ 12, 2021
31 °C

ಏ.11 ರಿಂದ ಉದ್ಯೋಗದ ಸ್ಥಳದಲ್ಲೇ ಲಸಿಕೆ: ಡಾ.ಕೆ. ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲೇ ಕೋವಿಡ್‌ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಏಪ್ರಿಲ್‌ 11ರಿಂದ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಬುಧವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬೃಹತ್‌ ಉದ್ದಿಮೆಗಳು ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳ ಮನವಿಯನ್ನು ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಕೆಲಸದ ಸ್ಥಳದಲ್ಲಿ ಲಸಿಕೆ ನೀಡಲು ಅನುಮತಿ ಕೊಟ್ಟಿದೆ. ಅದಕ್ಕೆ ಪೂರಕವಾಗಿ ವ್ಯವಸ್ಥೆ ಮಾಡಲಾಗುವುದು’ ಎಂದರು.

ರಾಜ್ಯಕ್ಕೆ ಇದುವರೆಗೆ 50 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ಪೂರೈಕೆಯಾಗಿದೆ. ಕೆಲವೇ ದಿನಗಳಲ್ಲಿ 50 ಲಕ್ಷ ಡೋಸ್‌ ಪೂರೈಕೆಯಾಗಲಿದೆ. ಕೋವಿಡ್‌ ನಿಯಂತ್ರಿಸುವುದಕ್ಕಾಗಿ ರಾಜ್ಯದಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಎರಡು ವಾರಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಉಸಿರಾಟದ ತೀವ್ರ ತೊಂದರೆ (ಸಾರಿ) ಮತ್ತು ವಿಷಮ ಶೀತ ಜ್ವರದ (ಐಎಲ್‌ಐ) ಪ್ರಕರಣಗಳ ಪತ್ತೆ ಮಾಡುವುದು ಕಡಿಮೆಯಾಗಿದ್ದು, ಈ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ. ಪಾಸಿಟಿವಿಟಿ ದರ ಶೇಕಡ 6 ರಿಂದ ಶೇ 9ರವರೆಗೂ ತಲುಪಿ ಅದರಲ್ಲಿ ಶೇ 20ರಿಂದ 25ರಷ್ಟು ಮಂದಿ ತೀವ್ರ ನಿಗಾ ಘಟಕಕ್ಕೆ ದಾಖಲಾಗುವ ಪರಿಸ್ಥಿತಿ ಎದುರಾದರೆ ಕೆಟ್ಟ ಸನ್ನಿವೇಶ ಎದುರಿಸಬೇಕಾಗುತ್ತದೆ. ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ದೈನಂದಿನ ಪ್ರಕರಣಗಳ ಸಂಖ್ಯೆ ಐದು ಸಾವಿರದ ಸಮೀಪಕ್ಕೆ ಬಂದಿದ್ದು, ಪಾಸಿಟಿವಿಟಿ ದರ ಶೇ 5.56ಕ್ಕೆ ಮುಟ್ಟಿದೆ. ಬುಧವಾರ ರಾಜ್ಯದಲ್ಲಿ ಒಟ್ಟು 35 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದರೆ, 25 ಪ್ರಕರಣಗಳು ಬೆಂಗಳೂರಿನಲ್ಲೇ ಇವೆ. ಪರಿಸ್ಥಿತಿ ನಿಯಂತ್ರಣ ಕುರಿತು ಬಿಬಿಎಂಪಿ, ಬೆಂಗಳೂರು ನಗರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಬೀದರ್‌, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ವಿಡಿಯೊ ಸಂವಾದದ ಮೂಲಕ ಸಭೆ ನಡೆಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.