ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಮ್‌ ತೆರೆಯಲು ಸರ್ಕಾರ ಅನುಮತಿ: ಶೇ 50ರಷ್ಟು ಜನರಿಗೆ ಅವಕಾಶ

Last Updated 4 ಏಪ್ರಿಲ್ 2021, 16:40 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮಾರ್ಗಸೂಚಿಗಳನ್ನು ಪುನಃ ಪರಿಷ್ಕರಿಸಿರುವ ರಾಜ್ಯ ಸರ್ಕಾರ, ಸಾಮರ್ಥ್ಯದ ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಿ ಜಿಮ್‌ ತೆರೆಯಲು ಅನುಮತಿ ನೀಡಿ ಭಾನುವಾರ ಆದೇಶ ಹೊರಡಿಸಿದೆ.

ಶುಕ್ರವಾರ ಹೊಸ ಮಾರ್ಗಸೂಚಿ ಪ್ರಕಟಿಸಿದ್ದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಜಿಮ್‌ಗಳನ್ನು ಬಂದ್‌ ಮಾಡುವಂತೆ ಆದೇಶಿಸಿದ್ದರು. ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಸೀಟುಗಳ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಚಿತ್ರರಂಗದ ಪ್ರಮುಖರ ಒತ್ತಡಕ್ಕೆ ಮಣಿದ ಸರ್ಕಾರ, ಮಂಗಳವಾರದವರೆಗೂ (ಏಪ್ರಿಲ್‌ 7) ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಸೀಟುಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ಶನಿವಾರ ರಾತ್ರಿ ಪರಿಷ್ಕೃತ ಆದೇಶ ಹೊರಡಿಸಿತ್ತು.

ಜಿಮ್‌ಗಳನ್ನೂ ತೆರೆಯಲು ಅನುಮತಿ ನೀಡುವಂತೆ ಕೋರಿ ರಾಜ್ಯ ಜಿಮ್‌ ಮಾಲೀಕರು ಮತ್ತು ತರಬೇತುದಾರರ ನಿಯೋಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು. ಆಗ್ರಹಕ್ಕೆ ಮಣಿದಿರುವ ಮುಖ್ಯಮಂತ್ರಿ, ಜಿಮ್‌ ತೆರೆಯಲು ಅನುಮತಿ ನೀಡುವಂತೆ ಸೂಚಿಸಿದ್ದರು. ಬಳಿಕ ಮಾರ್ಗಸೂಚಿ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ಜಿಮ್‌ನ ಸಾಮರ್ಥ್ಯದ ಅರ್ಧದಷ್ಟು ಮಂದಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ. ಪ್ರತಿ ವ್ಯಕ್ತಿಯ ಬಳಕೆಯ ಬಳಿಕ ಜಿಮ್‌ ಸಲಕರಣೆಗಳನ್ನು ಸ್ಯಾನಿಟೈಸ್‌ ಮಾಡಬೇಕು. ಷರತ್ತುಗಳನ್ನು ಉಲ್ಲಂಘಿಸಿದರೆ ಕೋವಿಡ್‌ ಸಾಂಕ್ರಾಮಿಕ ಅಂತ್ಯಗೊಳ್ಳುವವರೆಗೂ ಅಂತಹ ಜಿಮ್‌ಗಳನ್ನು ಮುಚ್ಚಲು ಆದೇಶಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್‌ 2ರಂದು ಪ್ರಕಟಿಸಿರುವ ಮಾರ್ಗಸೂಚಿಯ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಮತ್ತು ಧಾರವಾಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶ. ಪಬ್‌, ಬಾರ್‌, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆಯ ಶೇ.50 ರಷ್ಟು ಮೀರುವಂತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT