ಶನಿವಾರ, ಜುಲೈ 2, 2022
27 °C

ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ; ಪರಸ್ಪರ ಕನಿಷ್ಠ 2 ಅಡಿ ಅಂತರ: ಸರ್ಕಾರದ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್‌ ನಾಲ್ಕನೇ ಅಲೆಯ ಬಗ್ಗೆ ಚರ್ಚೆಯಾಗುತ್ತಿರುವುದು ಹಾಗೂ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸೋಮವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಜಾಗಗಳಲ್ಲಿ ಹಾಗೂ ಸಂಚಾರದ ವೇಳೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಿದ್ದು, ಅಂಥ ಕ್ರಿಯೆ ಕಂಡು ಬಂದರೆ ದಂಡ ಹಾಕಲು ಸೂಚಿಸಲಾಗಿದೆ. ಹಾಗೇ ಜನರು ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಕನಿಷ್ಠ 2 ಅಡಿ ಅಂತರ ಕಾಯ್ದುಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

2022ರ ಫೆಬ್ರುವರಿ 28ರಿಂದ ರಾಜ್ಯದಲ್ಲಿ ಕೋವಿಡ್‌–19 ನಿರ್ಬಂಧಗಳನ್ನು ತೆಗೆದು ಹಾಕಲಾಗಿದ್ದು, ಎಲ್ಲ ಕಾರ್ಯಕ್ರಮಗಳು ತೊಡಕಿಲ್ಲದೆ ನಡೆಯುತ್ತಿವೆ. ಈಗ ದೆಹಲಿ, ಹರಿಯಾಣ ಹಾಗೂ ತಮಿಳುನಾಡಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲೂ ನಿತ್ಯ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆ ಕಂಡು ಬಂದಿರುವುದಾಗಿ ಸರ್ಕಾರ ಹೇಳಿದೆ.

ಇದನ್ನೂ ಓದಿ–

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 64 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸದ್ಯ ರಾಜ್ಯದಲ್ಲಿ 1,671 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ದೈನಂದಿನ ಪಾಸಿಟಿವಿಟಿ ದರ ಶೇ 1.38 ರಷ್ಟಿದೆ.

ಕಡ್ಡಾಯವಾಗಿ ಮಾಸ್ಕ್‌ ಧರಿಸುವುದೂ ಸೇರಿ ಕೆಲವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ನಿರ್ಧರಿಸಲಾಗಿದೆ.

ಇದನ್ನೂ ಓದಿ–

ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಕೋವಿಡ ದೃಢ ಪ್ರಮಾಣ ಶೇ 1.9 ರಷ್ಟಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ ವಿಶೇಷ ನಿಗಾ ಇಡಲು ತೀರ್ಮಾನಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು