ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್‌ನಿಂದ ಮೃತಪಟ್ಟವರ ಗೌರವಯುತ ಅಂತ್ಯಕ್ರಿಯೆ’

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿಕೆ: ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ
Last Updated 21 ಏಪ್ರಿಲ್ 2021, 16:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ನಿಂದ ಮೃತಪಟ್ಟವರ ಗೌರವಯುತ ಅಂತ್ಯಕ್ರಿಯೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್‌ ಗುಪ್ತಾ ಜೊತೆಗೂ ಮಾತನಾಡಿದ್ದೇನೆ. ನಗರದ 13 ಚಿತಾಗಾರಗಳಲ್ಲೂ ಅಂತ್ಯಕ್ರಿಯೆ ನಡೆಸಲು ಅನುವು ಮಾಡಿಕೊಡುವಂತೆ ಸೂಚಿಸಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಿಗೆ ಬುಧವಾರ ಭೇಟಿ ನೀಡಿದ್ದ ಅವರು ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

‘ಆಯ್ದ ಚಿತಾಗಾರಗಳಲ್ಲಷ್ಟೇ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿತ್ತು. ಹೀಗಾಗಿ ಸಮಸ್ಯೆ ತಲೆದೋರಿತ್ತು. ಇನ್ನು ಮುಂದೆ ಈ ಸಮಸ್ಯೆ ಉದ್ಭವಿಸುವುದಿಲ್ಲ’ ಎಂದರು.

‘ಪ್ರತಿ ದಿನವೂ ಪ್ರಯೋಗಾಲಯಗಳಿಗೆ ಕನಿಷ್ಠ 3 ಬ್ಯಾಚ್‌ಗಳಲ್ಲಿ ಮಾದರಿ ಕಳುಹಿಸಬೇಕು. ಅವುಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಪ್ರಕಟಿಸುವ ಕೆಲಸ ಆಗಬೇಕು. ಇದರಿಂದ ಸೋಂಕಿತರಿಗೆ ಶೀಘ್ರವೇ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಜೀವಹಾನಿ ಕೂಡ ತಪ್ಪಿಸಬಹುದು’ ಎಂದು ಆಸ್ಪತ್ರೆಗಳ ಹಿರಿಯ ವೈದ್ಯಾಧಿಕಾರಿಗಳು ಹಾಗೂ ಆಡಳಿತ ವರ್ಗದವರಿಗೆ ಸೂಚಿಸಿದರು.

‘ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ 8 ಸಾವಿರ ಲೀಟರ್ ಸಾಮರ್ಥ್ಯದ ಆ್ಯಕ್ಸಿಜನ್ ಪ್ಲಾಂಟ್ ಇದೆ. ನಿತ್ಯವೂ 4 ಸಾವಿರ ಲೀಟರ್‌ ಬಳಕೆ ಆಗುತ್ತಿದೆ ಎಂದು ಆಸ್ಪತ್ರೆಯ ಸೂಪರಿಟೆಂಡೆಂಟ್ ವೆಂಕಟೇಶಯ್ಯ ಮಾಹಿತಿ ನೀಡಿದ್ದಾರೆ. ಕೋವಿಡ್‌ ಮೆಡಿಕಲ್‌ ಕಿಟ್‌ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಖರೀದಿಯಲ್ಲಿ ಆಗಿರುವ ಗೊಂದಲದಿಂದ ಈ ಸಮಸ್ಯೆ ಉದ್ಭವಿಸಿದೆ. ಇದನ್ನು ಶೀಘ್ರವೇ ಸರಿಪಡಿಸಲಾಗುತ್ತದೆ’ ಎಂದು ಹೇಳಿದರು.

‘ಸೋಂಕಿಗೊಳಗಾದವರು ನಿರ್ದಿಷ್ಟ ಆಸ್ಪತ್ರೆಯೇ ಬೇಕೆಂದು ಕೂರಬಾರದು. ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ 120 ವೆಂಟಿಲೇಟರ್‌ಗಳಿವೆ. 450 ಹಾಸಿಗೆಗಳ ಪೈಕಿ 180ಕ್ಕೂ ಹೆಚ್ಚು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದೆ. ಇನ್ನೂ 100 ಹಾಸಿಗೆಗಳ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ’ ಎಂದರು.

‘ಈವರೆಗೆ ದಿನಕ್ಕೆ ಒಮ್ಮೆ ಮಾತ್ರ ಕೊರೊನಾ ಸೋಂಕಿತರ ಮಾದರಿ ಸ್ವೀಕರಿಸುತ್ತಿದ್ದ ರಾಜಾಜಿನಗರದ ಲೈಫ್ ಸೆಲ್ ಲ್ಯಾಬ್, ಈಗ 3 ಬ್ಯಾಚ್‌ಗಳಲ್ಲಿ ಮಾದರಿ ಕಳಿಸಿದರೂ ಪರೀಕ್ಷೆ ಮಾಡಿ ಫಲಿತಾಂಶ ನೀಡಲು ಮುಂದೆ ಬಂದಿದೆ. ಇಎಸ್‌ಐ ಆಸ್ಪತ್ರೆಯಲ್ಲಿ 420 ಹಾಸಿಗೆಗಳಿದ್ದು, ಈ ಪೈಕಿ 120 ಹಾಸಿಗೆಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಇದನ್ನು 180ಕ್ಕೆ ಹೆಚ್ಚಿಸುವಂತೆ ನಿರ್ದೇಶಿಸಲಾಗಿದೆ. ಈ ಆಸ್ಪತ್ರೆಗೆ ಆರ್‌ಎನ್‌ಎ ಎಕ್ಸ್‌ಟ್ರ್ಯಾಕ್‌ ಮಿಷನ್‌ ಹಾಗೂ ಯೂಮಿಡಿಫಯರ್‌ ಯಂತ್ರದ ಅಗತ್ಯ ಇದ್ದು, ಅವುಗಳನ್ನು ಶೀಘ್ರವೇ ಒದಗಿಸಲಾಗುವುದು’ ಎಂದು ತಿಳಿಸಿದರು.

‘ಹಾಸಿಗೆ ಸಾಮರ್ಥ್ಯ 750ಕ್ಕೆ ಹೆಚ್ಚಿಸಲು ಕ್ರಮ’

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ 350 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಇದನ್ನು 750ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಪ್ರತಿ ದಿನ 50 ಹಾಸಿಗೆ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಇಲ್ಲಿ ಈಗಾಗಲೇ 50 ವೆಂಟಿಲೇಟರ್‌ಗಳಿವೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.

‘ಕೊರೊನಾ ಸೋಂಕು ತಗುಲಿದೆ ಎಂದು ಯಾರೂ ಗಾಬರಿಗೊಳಗಾಗಬಾರದು. ತುರ್ತು ಸಂದರ್ಭದಲ್ಲಿ ಕೋವಿಡ್‌ ಸಹಾಯವಾಣಿ 1912 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.

***

ಕೆಮ್ಮು, ಶೀತ, ನೆಗಡಿಯಂತಹ ರೋಗ ಲಕ್ಷಣಗಳಿದ್ದವರು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಅಲಕ್ಷ್ಯ ಬೇಡ.

ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉಪಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT