ವಿದ್ಯುತ್ ಪರಿವರ್ತಕಗಳ ಎತ್ತರಿಸಲು ಸೂಚನೆ

ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು.
ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗುತ್ತಿದೆ. ಇದರಿಂದ ಪದೇ ಪದೇ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಯೋಜನೆ ರೂಪಿಸಬೇಕು’ ಎಂದು ನಿರ್ದೇಶನ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಜಮೀನಿನಲ್ಲಿ ವಿವಿಧ ನಿಗಮಗಳು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ₹ 50,000 ಅನುದಾನ ಸಾಕಾಗದಿದ್ದರೆ, ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನ ಪಡೆಯಬೇಕು ಎಂದು ಸೂಚನೆ ನೀಡಿದರು.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯ್ಕ್ ಮತ್ತು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್. ಮಂಜುಳಾ ಸಭೆಯಲ್ಲಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.