ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಶೋಧಕಿ ಹಾಗೂ ಲೇಖಕಿ ಜ್ಯೋತ್ಸ್ನಾ ಕಾಮತ್‌ ಇನ್ನಿಲ್ಲ

Last Updated 24 ಆಗಸ್ಟ್ 2022, 16:08 IST
ಅಕ್ಷರ ಗಾತ್ರ

ಬೆಂಗಳೂರು: ಸಂಶೋಧಕಿ ಹಾಗೂ ಲೇಖಕಿಜ್ಯೋತ್ಸ್ನಾ ಕಾಮತ್ (86) ಅವರು ನಗರದಲ್ಲಿ ಬುಧವಾರ ಮೃತಪಟ್ಟಿದ್ದಾರೆ.

ಅವರು ಕ್ಯಾನ್ಸರ್ ಪೀಡಿತರಾಗಿದ್ದರು. ಮಲ್ಲೇಶ್ವರದ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ ಮಗ ವಿಕಾಸ್ ಕಾಮತ್, ಸೊಸೆ ಕಿಮ್ ಕಾಮತ್ ಹಾಗೂ ಮೊಮ್ಮಗಳು ಮೀನಾ ಕಾಮತ್ ಇದ್ದಾರೆ. ಗುರುವಾರ ಬೆಳಿಗ್ಗೆ 10 ಗಂಟೆಗೆಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಜ್ಯೋತ್ಸ್ನಾ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಜನಿಸಿದ್ದರು. ಕುಮಟಾದ ಕೆನರಾ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದ ಅವರು, ಧಾರವಾಡದ ವನಿತಾ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ್ದರು. ಮುಂದೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಷಯದಲ್ಲಿ ಎಂ.ಎ. ಪದವಿ ಪಡೆದಿದ್ದರು.

1964ರಲ್ಲಿ ಧಾರವಾಡ ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕಿಯಾಗಿ ಸೇರಿದರು. ಆನಂತರ ಕೋಲ್ಕತ್ತ, ಜೈಪುರ, ಮುಂಬೈ, ಮೈಸೂರು ಮತ್ತು ಬೆಂಗಳೂರು ನಗರಗಳ ಆಕಾಶವಾಣಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ, ಕೊನೆಗೆ ಬೆಂಗಳೂರು ಆಕಾಶವಾಣಿಯಲ್ಲಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿ, 1994ರಲ್ಲಿ ನಿವೃತ್ತಿ ಹೊಂದಿದರು. ಅವರು ಆಕಾಶವಾಣಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಬಿತ್ತರಗೊಂಡ ‘ಗಾಂಧಿ-ಒಂದು ಪುನರ್ದರ್ಶನ’ ಮತ್ತು ‘ಹಿರಿಯರ ಯುಗಾದಿ ಮೇಳ’ ಕಾರ್ಯಕ್ರಮಗಳು ಪುಸ್ತಕ ರೂಪದಲ್ಲೂ ಪ್ರಕಟವಾಗಿವೆ.

‘ಸಂಸಾರದಲ್ಲಿ ಸ್ವಾರಸ್ಯ’, ‘ಕರ್ನಾಟಕ ಶಿಕ್ಷಣ ಪರಂಪರೆ’, ‘ಹೀಗಿದ್ದೇವೆ ನಾವು, ‘ನೆನಪಿನಲ್ಲಿ ನಿಂತವರು’, ‘ನಗೆ ಕೇದಿಗೆ’ ಹಾಗೂ ‘ನಗೆ ನವಿಲು’ ಅವರ ಪ್ರಮುಖ ಕೃತಿಗಳಾಗಿವೆ.

1991ರಲ್ಲಿ ರಾಜ್ಯ ಸರ್ಕಾರ ಅವರಿಗೆ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿದೆ. ಅವರ ‘ಕರ್ನಾಟಕ ಶಿಕ್ಷಣ ಪರಂಪರೆ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ವಿಶೇಷ ಪುರಸ್ಕಾರ, ಕನ್ನಡ ಸಾಹಿತ್ಯ ಸಂಶೋಧನೆಗಾಗಿ ‘ಕಿಟ್ಟೆಲ್ ಪುರಸ್ಕಾರ’ ದೊರೆತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT