ಮಂಗಳವಾರ, ಮೇ 18, 2021
24 °C

ಕೋವಿಡ್‌ ನಿಭಾಯಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ನೇತೃತ್ವದಲ್ಲಿ ಸಭೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆ ತೀವ್ರವಾಗಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಪ್ರಮುಖ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ  ಜೊತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಶನಿವಾರ ಸಂಜೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಬಳಸಿಕೊಂಡು ಹೋಟೆಲ್‌ಗಳನ್ನು ಆಕ್ಸಿಜನ್‌ ಬೆಡ್ ಮಾದರಿಯ ಸ್ಟೆಪ್ ಡೌನ್ (ವೆಂಟಿಲೇಟರ್‌ ಇಲ್ಲದ ಐಸಿಯು) ಕೋವಿಡ್ ಆಸ್ಪತ್ರೆಗಳಾಗಿ ಪರಿವರ್ತಿಸಲು ಮತ್ತು ಕೇಂದ್ರೀಕೃತ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್‌ಗಳನ್ನು ಐಸಿಯು ಬೆಡ್‌ಗಳಾಗಿ ಪರಿವರ್ತಿಸಲು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಕೃಪಾಂಕ ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು. ಅದಕ್ಕೆ ಪೂರಕವಾಗಿ, ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೀಎ ಕೆಲ ಮಾಡುವವರಿಗೆ ಸೂಕ್ತ ಭತ್ಯೆ ನೀಡಲು ನಿರ್ಧರಿಸಲಾಗಿದೆ.

ನರ್ಸಿಂಗ್, ಫಾರ್ಮಸಿ, ಫಿಜಿಯೋಥೆರಪಿ, ಆಯುಷ್, ದಂತ ವೈದ್ಯಕೀಯ ಕೋರ್ಸ್‌ಗಳ ಹಾಗೂ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು. ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ವೈದ್ಯಕೀಯ ಪರಿಷತ್‌ನಲ್ಲಿ ನೋಂದಣಿ ಮಾಡುವ ಬಗ್ಗೆ ಪರಿಶೀಲಿಸಲ ತೀರ್ಮಾನಿಸಲಾಯಿತು.

ರೋಗಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಅದನ್ನು ಕಡಿಮೆಗೊಳಿಸಲು, ಸೋಂಕಿತರನ್ನು ಪ್ರತ್ಯೇಕಿಸಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಲು ಮತ್ತು ಲಕ್ಷಣರಹಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯ ಹೆಚ್ಚಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

‘ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳ ಸಾಮಾನ್ಯ ಬೆಡ್‌ಗಳನ್ನು ಆಕ್ಸಿಜನೇಟೆಡ್ ಬೆಡ್‌ಗಳಾಗಿ ಪರಿವರ್ತಿಸಲಾಗುವುದು. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಗುರುತಿಸಿ, ಅಂಥವರನ್ನು ಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕೂಡಾ ತೀರ್ಮಾನಿಸಲಾಯಿತು.

ರೆಮ್‌ಡಿಸಿವಿರ್‌ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಆಡಿಟ್ ವ್ಯವಸ್ಥೆ ರೂಸಲಾಗುವುದು. ಕೋವಿಡ್ ಲಸಿಕೆ ಪ್ರಕ್ರಿಯೆ ತ್ವರಿತಗೊಳಿಸುವುದು, ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಭತ್ಯೆ ಹೆಚ್ಚಿಸುವುದು, ಈ ವೈದ್ಯರು, ಸಿಬ್ಬಂದಿ ಸೋಂಕಿತರಾದರೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡುವ ಬಗ್ಗೆಯೂ ಚರ್ಚೆ ನಡೆಯಿತು.

ಉಪಮುಖ್ಯಮಂತ್ರಿ ಡಾ.  ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ನಾರಾಯಣ ಹೃದಯಾಲಯದ ಡಾ. ದೇವಿಶೆಟ್ಟಿ, ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅಧ್ಯಕ್ಷ ಜಯರಾಂ ಸಭೆಯಲ್ಲಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು