ಮಂಗಳವಾರ, ಸೆಪ್ಟೆಂಬರ್ 27, 2022
27 °C

ಲೋಕ ಅದಾಲತ್‌ ಬಗ್ಗೆ ಅಪಪ್ರಚಾರ: ನ್ಯಾಯಮೂರ್ತಿ ಬಿ.ವೀರಪ್ಪ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕ್ಷುಲ್ಲಕ ಮತ್ತು ಸಂಚಾರ ನಿಯಮ ಉಲ್ಲಂಘನೆ ಕೇಸುಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಅವಕಾಶವಿಲ್ಲ ಎಂದು ಕೆಲ ವಕೀಲರು, ನ್ಯಾಯಾಧೀಶರು, ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರು ಮತ್ತು ಪಟ್ಟಭದ್ರ ಹಿತಾಸಕ್ತಿ ಹೊಂದಿದವರು ಅಪಪ್ರಚಾರ ನಡೆಸುತ್ತಿದ್ದಾರೆ’ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯಕಾರಿ ಅಧ್ಯಕ್ಷರೂ ಆದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ 13ರಂದು ರಾಜ್ಯಾದಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್‌ ಕುರಿತಂತೆ ಮಾಧ್ಯಮಗೋಷ್ಠಿಯಲ್ಲಿ ಅಂಕಿ ಅಂಶ ನೀಡಿ ಮಾತನಾಡಿದ ಅವರು, ‘ಇಂತಹ ಅಪಪ್ರಚಾರದಿಂದ ಸಾರ್ವಜನಿಕರಿಗೆ ಅದರಲ್ಲೂ ಬಡ ಕಕ್ಷಿದಾರರಿಗೆ ತೊಂದರೆಯಾಗಲಿದೆ. ಹಾಗಾಗಿ, ಯಾರೂ ಈ ರೀತಿಯ ಅಪ ಪ್ರಚಾರದಲ್ಲಿ ತೊಡಗಿಸಿಕೊಳ್ಳಬಾರದು’ ಎಂದು ಎಚ್ಚರಿಸಿದ್ದಾರೆ.

‘ಆರಂಭಿಕ ಹಂತದಲ್ಲೇ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಕೋರ್ಟ್ ಮೆಟ್ಟಿಲೇರುವ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಲಿದೆ. ಆದ್ದರಿಂದ, ಅಪಪ್ರಚಾರದಲ್ಲಿ ತೊಡಗಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಲೋಕ ಅದಾಲತ್‌ನಲ್ಲಿ ಯಾವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅವಕಾಶವಿದೆ ಎಂಬ ಪಟ್ಟಿಯನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ಬಗ್ಗೆ ಏನಾದರೂ ಅನುಮಾನಗಳಿದ್ದರೆ ಕೆಎಸ್‌ಎಲ್‌ಎಸ್‌ಎ ಅನ್ನು ಸಂಪರ್ಕಿಸಬಹುದು’ ಎಂದು ಅವರು ತಿಳಿಸಿದರು.

ಇದೇ 13ರಂದು ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ದಾಖಲೆಯ ಒಟ್ಟು 8.34 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಒಟ್ಟು 1009 ಬೈಠಕ್‌ಗಳನ್ನು ನಡೆಸಿ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿದ್ದ 1,53,024 ಮತ್ತು ವ್ಯಾಜ್ಯಪೂರ್ವ 6,81,596 ಸೇರಿದಂತೆ ಒಟ್ಟು 8,34,620 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಲಾಗಿದೆ’ ಎಂದರು.

‘ಈ ಅದಾಲತ್‌ನಲ್ಲಿ 1,380 ವೈವಾಹಿಕ ವಿವಾದ ಪ್ರಕರಣಗಳನ್ನು ಇತ್ಯರ್ಥಪಡಿಸಿ, 120 ಜೋಡಿಗಳನ್ನು ಒಂದುಗೂಡಿಸಲಾಗಿದೆ. ಮೈಸೂರಿನಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ 27 ದಂಪತಿ ಹಾಗೂ ಬೆಂಗಳೂರಿನ 12 ದಂಪತಿ ಪುನರ್‌ ದಾಂಪತ್ಯಕ್ಕೆ ಅನುವು ಮಾಡಿಕೊಡಲಾಗಿದೆ’ ಎಂದು ನ್ಯಾ. ವೀರಪ್ಪ ವಿವರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು