ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ-ನೋಟಿಫೈ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ

Last Updated 17 ಜೂನ್ 2022, 7:42 IST
ಅಕ್ಷರ ಗಾತ್ರ

ಬೆಂಗಳೂರು: ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಲಾಗಿದೆ ಎಂಬ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶುಕ್ರವಾರ ಜಾಮೀನು ಕೋರಿ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಈ ಸಂಬಂಧ ಬೆಳಗ್ಗೆ 11 ಗಂಟೆಗೆ ಸಿಟಿ ಸಿವಿಲ್ ಕೋರ್ಟ್‌ನ 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯಕ್ಕೆ ತಮ್ಮ ವಕೀಲರ ಸಮೇತ ಖುದ್ದು ಹಾಜರಾದ ಅವರು ಜಾಮೀನು ಅರ್ಜಿ ಸಲ್ಲಿಸಿದರು.

ಅರ್ಜಿ ಸ್ವೀಕರಿಸಿದ ನ್ಯಾಯಾಧೀಶ ಬಿ.ಜಯಂತ ಕುಮಾರ್ ದೂರುದಾರರ ಪರ ವಕೀಲರಿಂದ ಪ್ರತಿಕ್ರಿಯೆ ಕೇಳಿದಾಗ, ದೂರುದಾರರ ಪರ ವಕೀಲ ಕೆ.ವಿ. ಧನಂಜಯ, 'ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪರಿಶೀಲಿಸಿ ನಮ್ಮ ಪ್ರತ್ಯುತ್ತರವನ್ನು ಸಲ್ಲಿಸುತ್ತೇವೆ. ಆರೋಪಿಗೆ ಜಾಮೀನು ನಿರಾಕರಿಸಲು ಸೂಕ್ತ ಕಾರಣಗಳು ಲಭ್ಯವಿಲ್ಲ ಎಂದಾದರೆ, ಅವರ ಜಾಮೀನಿಗೆ ನಮ್ಮ ಪ್ರತ್ಯುತ್ತರದಲ್ಲಿ ವಿರೋಧ ವ್ಯಕ್ತಪಡಿಸುವುದಿಲ್ಲ. ಹಾಗಾಗಿ, ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು' ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಧೀಶರು ವಿಚಾರಣೆಯನ್ನು ಶನಿವಾರಕ್ಕೆ (ಜೂ.18) ಮುಂದೂಡಿದರು.

ಬಿ.ಎಸ್.ಯಡಿಯೂರಪ್ಪ ಪರ ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಜರಾಗಿ ಜಾಮೀನು ಅರ್ಜಿ ಸಲ್ಲಿಸಿದರು.

ಪ್ರಕರಣವೇನು?: ಮಾಹಿತಿ ತಂತ್ರಜ್ಞಾನ (ಐ.ಟಿ) ಕಾರಿಡಾರ್‌ ನಿರ್ಮಾಣಕ್ಕಾಗಿ ಬೆಂಗಳೂರಿನ ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿ-ನೋಟಿಫೈ ಮಾಡಿದ ಆರೋಪವನ್ನು ಬಿ.ಎಸ್. ಯಡಿಯೂರಪ್ಪ ಎದುರಿಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೈಗಾರಿಕಾ ಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕ ಆರ್‌.ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಜನರ ವಿರುದ್ಧ ವಾಸುದೇವ ರೆಡ್ಡಿ 2013ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಆರ್.ವಿ. ದೇಶಪಾಂಡೆ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ಈಗಾಗಲೇ 2015ರಲ್ಲಿ ರದ್ದುಗೊಳಿಸಿದೆ. ಬಾಕಿ ಆರೋಪಿಗಳ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯವೇ ರದ್ದುಗೊಳಿಸಿತ್ತು. ಸದ್ಯ ಯುಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಕಲಂ 13(1)(ಡಿ) ಮತ್ತು 13(2)ರ ಅಡಿಯಲ್ಲಿನ ಆರೋಪಗಳ ವಿಚಾರಣೆ ಜೀವಂತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT