ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೇಂದ್ರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಮತ್ತು ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಬಂಡಾಯ ಸಾರಿದ್ದಾರೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ, ದೇವನಹಳ್ಳಿ ಹಾಗೂ ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ, ಗ್ರಾಮ ಪಂಚಾಯಿತಿಯ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪತ್ರ ಪ್ರದರ್ಶಿಸಿd ಸ್ಥಳೀಯ ಕಾಂಗ್ರೆಸ್ ಮುಖಂಡರು, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡದ ವ್ಯಕ್ತಿಗೆ ಟಿಕೆಟ್ ನೀಡಿದರೆ ಮುಳುವಾಗಲಿದೆ. ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒಕ್ಕೊರಲಿನಿಂದ ಒತ್ತಾಯಿಸಿದರು.
ಕ್ಷೇತ್ರದಲ್ಲಿ ಬಿಜೆಪಿಯು ದಲಿತ ಎಡಗೈ ಸಮುದಾಯದ ವ್ಯಕ್ತಿಗೆ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್ ಕೂಡಾ ಅದೇ ಸಮುದಾಯದ ವ್ಯಕ್ತಿಗೆ ಟಿಕೆಟ್ ನೀಡದಿದ್ದರೆ ಮತಗಳು ವಿಭಜನೆ ಆಗಲಿವೆ ಎಂದು ಉಲ್ಲೇಖಿಸಲಾಗಿದೆ.
‘ಐದು ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಸಮಯ, ಹಣ ಖರ್ಚು ಮಾಡಿ ಪಕ್ಷ ಸಂಘಟನೆ ಮಾಡಿದ್ದೇವೆ. ಕೊನೆ ಕ್ಷಣದಲ್ಲಿ ಕ್ಷೇತ್ರದ ಜನರಿಗೆ ಪರಿಚಯವಿಲ್ಲದ ವ್ಯಕ್ತಿಯನ್ನು ಕರೆ ತಂದು ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲಲಿದೆ’ ಎಂದು ಎಚ್ಚರಿಸಿದರು.
‘ಸ್ಥಳೀಯರಿಗೆ ಟಿಕೆಟ್ ನೀಡಬೇಕು. ಒಂದು ವೇಳೆ ಮುನಿಯಪ್ಪರಿಗೆ ಟಿಕೆಟ್ ನೀಡಿದ್ದಲ್ಲಿ ನಮ್ಮ ರಾಜೀನಾಮೆ ಅಂಗೀಕರಿಸಿ, ಹೊಸದಾಗಿ ಪದಾಧಿಕಾರಿಗಳನ್ನು ನೇಮಿಸಿಕೊಂಡು ಪಕ್ಷ ಸಂಘಟಿಸಿ’ ಎಂದು ಸವಾಲು ಹಾಕಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.