ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಶ್ರೀನಿವಾಸ ಗೌಡ ವಿರುದ್ಧ ಕ್ರಮಕ್ಕೆ ಸೂಚನೆ

ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಸದ್ಯಕ್ಕೆ ಕ್ರಮವಿಲ್ಲ: ಎಚ್‌.ಡಿ.ದೇವೇಗೌಡ
Last Updated 7 ಸೆಪ್ಟೆಂಬರ್ 2021, 21:16 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.‌ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆಮಂಗಳವಾರ ಮಾತನಾಡಿದ ಅವರು, ‘ಕೋಲಾರ ಶಾಸಕರ ವಿಚಾರದಲ್ಲಿ ಇನ್ನು ಸಹಿಸಲು ಆಗುವುದಿಲ್ಲ. ನೇರವಾಗಿ ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಅವರು ಮಾತನಾಡುತ್ತಿದ್ದಾರೆ. ಸೂಕ್ತ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚಿಸಿದ್ದೇನೆ’ ಎಂದರು.

ಶಾಸಕ ಜಿ.ಟಿ. ದೇವೇಗೌಡ ಅವರು ಕೂಡ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ತಮಗೆ ಹಾಗೂ ಮಗನಿಗೆ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಬಳಿ ಕೇಳಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರು ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಎಲ್ಲಿಯೂ ಮಾತನಾಡಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವ ಸದ್ಯಕ್ಕೆ ಇಲ್ಲ ಎಂದು
ಹೇಳಿದರು.

ಸಹಕಾರ ಕೋರಿದ ಖರ್ಗೆ: ‘ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ನಾಲ್ಕು ಸ್ಥಾನ ಗಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ. ನನ್ನ ಮತ್ತು ಎಚ್.ಡಿ. ಕುಮಾರಸ್ವಾಮಿ ಜತೆ ಅವರು ಮಾತನಾಡಿದ್ದಾರೆ’ ಎಂದು ದೇವೇಗೌಡ ತಿಳಿಸಿದರು.

ಬಿಜೆಪಿಗೆ ಸಹಕಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕು‌ಮಾರಸ್ವಾಮಿ ಜತೆ ಮಾತನಾಡಿರುವ ಸಾಧ್ಯತೆ ಇದೆ. ಸ್ಥಳೀಯ ಮುಖಂಡರ ಅಭಿಪ್ರಾಯ ಕೇಳದೆ ನಿರ್ಧಾರ ಕೈಗೊಳ್ಳದಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.

‘ಖರ್ಗೆಯವರು ಅವರ ಪಕ್ಷದವರನ್ನು ಸಂಪರ್ಕಿಸಿ ಮಾತನಾಡಿದ್ದಾರೆ ಅನಿಸುತ್ತದೆ. ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕುಳಿತು ಮಾತನಾಡಲಿ ಆಮೇಲೆ ನೋಡೋಣ’ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಿಂದ ನಿರಾಶರಾಗಬೇಕಿಲ್ಲ. ಜೆಡಿಎಸ್ ಸದಸ್ಯತ್ವ ನೋಂದಣಿಗೆ ಆದ್ಯತೆ ನೀಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT