ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್ ಕರೆ: ಕೋವಿಡ್ ನಿಯಮ ಉಲ್ಲಂಘಿಸದಂತೆ ನಿರ್ದೇಶನ

ರ್‍ಯಾಲಿ ವೇಳೆ ನಿಯಮ ಪಾಲಿಸದ ಪಕ್ಷಗಳು; ಹೈಕೋರ್ಟ್ ಅಸಮಾಧಾನ
Last Updated 24 ನವೆಂಬರ್ 2020, 21:14 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್–19 ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಹೈಕೋರ್ಟ್ ಸೇರ್ಪಡೆ ಮಾಡಿದೆ.

ಡಿ.5ರಂದು ಕರೆ ನೀಡಿರುವ ಬಂದ್ ವೇಳೆ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ನಿರ್ದೇಶನ ನೀಡಿದೆ.

ರಾಜಕೀಯ ಪಕ್ಷಗಳ ರ್‍ಯಾಲಿ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಮತ್ತು ಅಂತರ ಕಾಪಾಡುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.

ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಜೆಡಿಎಸ್‌, ಕನ್ನಡ ಚಳವಳಿ ವಾಟಾಳ್ ಪಕ್ಷಗಳನ್ನು ಪ್ರತಿವಾದಿಗಳನ್ನು ಮಾಡಿರುವ ಪೀಠ, ‘ಈ ಹಿಂದೆ ನಡೆದಿರುವ ರ್‍ಯಾಲಿಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಅವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ತಡವಾಗಿ ಕ್ರಮ ಕೈಗೊಂಡಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.

‘ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವ ನಿಯಮಗಳನ್ನು ಅನುಷ್ಠಾನಗೊಳಿಸುವುದು ರಾಜಕೀಯ ಪಕ್ಷಗಳ ಪ್ರಮುಖ ಜವಾಬ್ದಾರಿ. ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಲು ಪಕ್ಷಗಳು ಸಿದ್ಧ ಇವೆಯೇ ಎಂಬುದರ ಕುರಿತು ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ಪ್ರತಿವಾದಿಗಳಿಗೆ ಪೀಠ ಸೂಚನೆ ನೀಡಿತು.

‘ಕನ್ನಡ ಚಳವಳಿ ವಾಟಾಳ್ ಪಕ್ಷ ಡಿ.5ರಂದು ರಾಜ್ಯ ಬಂದ್‌ಗೆ ಕರೆ ನೀಡಿದೆ. ಈ ಸಂದರ್ಭದಲ್ಲಿ ನಿಯಮ ಉಲ್ಲಂಘನೆಯಾಗುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT