ಬುಧವಾರ, ಮೇ 18, 2022
29 °C

ಪರಿಷತ್ ಸಭಾಪತಿ ಚುನಾವಣೆ: ಸಿದ್ದರಾಮಯ್ಯ ನಿವಾಸದಲ್ಲಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್‌ ಸಭಾಪತಿ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು, ಬಿಬಿಎಂಪಿ ಚುನಾವಣೆಗೆ ತಯಾರಿ, ಬೆಲೆ ಏರಿಕೆ ವಿರುದ್ಧ ಪಕ್ಷದಿಂದ ಪ್ರತಿಭಟನೆ ಕುರಿತಂತೆ ಹಲವು ವಿಷಯಗಳ ಕುರಿತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಬೆಂಗಳೂರು ನಗರದ ಶಾಸಕರು ಭಾನುವಾರ ಸಭೆ ನಡೆಸಿದರು.

ಪರಿಷತ್ ಹಿರಿಯ ಸದಸ್ಯ ಹಾಗೂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಸೀರ್ ಅಹ್ಮದ್ ಅವರನ್ನು ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

‘ಪರಿಷತ್‌ನಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಸಭಾಪತಿ ಸ್ಥಾನ ಗೆಲ್ಲಲು ಸಂಖ್ಯಾಬಲದ ಕೊರತೆ ಇದ್ದರೂ ಅಭ್ಯರ್ಥಿಯನ್ನು ಕಣಕ್ಕಿಳಿಸೋಣ. ಸೋಲು ಖಚಿತವಾಗಿದ್ದರೂ ಉಪ ಸಭಾಪತಿ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಈಗಲೂ ಅಭ್ಯರ್ಥಿಯನ್ನು ಕಣಕ್ಕಿಳಿಸೋಣ’ ಎಂಬ ತೀರ್ಮಾನಕ್ಕೆ ಕಾಂಗ್ರೆಸ್‌ ನಾಯಕರು ಬಂದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್‌ ಗುಂಡೂರಾವ್, ಪರಿಷತ್ ಸದಸ್ಯ ಪಿ.ಆರ್. ರಮೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಇದ್ದರು.

ರಕ್ಷಾ ರಾಮಯ್ಯ ಭೇಟಿ: ಯುವ ಕಾಂಗ್ರೆಸ್ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಕ್ಷಾ ರಾಮಯ್ಯ ಅವರು ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು