ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಾನೊಬ್ಬನೇ ಆಸ್ತಿ ಸಂಪಾದಿಸಿರುವುದಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆ ಯಾಕೆ?’

Last Updated 25 ನವೆಂಬರ್ 2020, 21:37 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನೆಯೇ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ. ಇದು ದ್ವೇಷದ ರಾಜಕಾರಣ ಅಲ್ಲವೇ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ, ಹೆದರುವುದಿಲ್ಲ’ ಎಂದು ಹೇಳಿದರು.

‘ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯೇ. ಯಾವುದಾದರೂ ಆರೋಪ ಸಾಬೀತಾಗಿದೆಯೇ. ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನೆಯೇ. ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ. ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನೆಯೇ. ಯಡಿಯೂರಪ್ಪನವರು ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು‘ ಎಂದು ಶಿವಕುಮಾರ್ ಪ್ರಶ್ನಿಸಿದರು.

‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದೂ ಹೇಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ’ ಎಂದು ದೂರಿದರು.

ಅಧಿಕಾರಿಗಳ ಕಾರ್ಯ ಪ್ರಶ್ನಿಸುವುದಿಲ್ಲ: ‘ನಾನು ಸಿಬಿಐ ಅಧಿಕಾರಿಗಳ ತನಿಖಾ ವ್ಯವಸ್ಥೆ ಪ್ರಶ್ನಿಸುವುದಿಲ್ಲ. ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡುತ್ತಿಲ್ಲ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಕೈಪಿಡಿ ನಾನು ಓದಿದ್ದೇನೆ. 48 ದಿನ ನಾನು ಈ ಕುರಿತ ಪುಸ್ತಕಗಳನ್ನು ಓದಿದ್ದೇನೆ. ಅವರಿಗೆ ಬರುವ ಮಾರ್ಗದರ್ಶನದಂತೆ ಅವರು ಕೆಲಸ ಮಾಡುತ್ತಿದ್ದಾರೆ’ ಎಂದರು.

ಅಹ್ಮದ್ ಪಟೇಲರಿಗೆ ನನ್ನ ಮೇಲೆ ನಂಬಿಕೆ ಇತ್ತು: ‘ಅಹ್ಮದ್ ಪಟೇಲ್ ಅವರ ನಿಧನ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಅವರು ರಾಜ್ಯಸಭೆ ಚುನಾವಣೆಗೆ ನಿಂತಾಗ ನನ್ನ ಮೇಲೆ ನಂಬಿಕೆ ಇಟ್ಟು ತಮ್ಮ ಶಾಸಕರನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟರು. ಒಂದು ವಾರದ ಹಿಂದೆ ಅವರ ಜತೆ ದೂರವಾಣಿಯಲ್ಲಿ ಮಾತನಾಡಿದ್ದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT