ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖನಿಜ ನಿಧಿ ಪಾಲು: ರಾಜ್ಯದ ಬೇಡಿಕೆ

Last Updated 15 ನವೆಂಬರ್ 2021, 21:52 IST
ಅಕ್ಷರ ಗಾತ್ರ

ಬೆಂಗಳೂರು: ಗಣಿಗಾರಿಕೆಯಿಂದ ಬಾಧಿತವಾದ ಜಿಲ್ಲೆಯ ಅಭಿವೃದ್ಧಿಗೆ ಸೀಮಿತವಾಗಿ ಮೀಸಲಿರಿಸುವ ಜಿಲ್ಲಾ ಖನಿಜ ನಿಧಿಯ (ಡಿಎಂಎಫ್‌) ಒಂದು ಭಾಗವನ್ನು ರಾಜ್ಯ ಸರ್ಕಾರಕ್ಕೆ ವರ್ಗಾಯಿಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಒತ್ತಾಯಿಸಿದರು.

ಕೇಂದ್ರ ಹಣಕಾಸು ಸಚಿವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸೋಮವಾರ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಗಣಿಗಾರಿಕೆ ನಡೆದ ಜಿಲ್ಲೆಯೊಳಗೆ ಮಾತ್ರ ಡಿಎಂಎಫ್‌ ಮೊತ್ತ ಬಳಕೆ ಮಾಡಬೇಕೆಂಬ ನಿಯಮವಿದೆ. ಅದನ್ನು ಸಡಿಲಿಸಿ, ರಾಜ್ಯ ಸರ್ಕಾರಕ್ಕೆ ಒಂದು ಭಾಗವನ್ನು ವರ್ಗಾಯಿಸಲು ಅವಕಾಶ ಕಲ್ಪಿಸಬೇಕು. ಇದರಿಂದ ಅದಿರು ಸಾಗಣೆಯಿಂದ ಹಾನಿಯಾದ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ವಿವಿಧ ಯೋಜನೆಗಳಿಗೆ ಅನುಮತಿ ನೀಡಲು ಪರಿಸರ ಮತ್ತು ಅರಣ್ಯ ಸಚಿವಾಲಯಗಳಲ್ಲಿ ಸ್ಪಷ್ಟವಾದ ಒಂದು ನೀತಿಯನ್ನು ರೂಪಿಸಬೇಕು. ದೇಶದಲ್ಲಿ ಹೂಡಿಕೆಗೆ ಆಸಕ್ತಿ ತೋರುವ ಕಂಪನಿಗಳ ಕುರಿತು ರಾಜ್ಯಗಳ ಜತೆ ಪಾರದರ್ಶಕವಾಗಿ ಮಾಹಿತಿ ಹಂಚಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೂಡಿಕೆ ಹೆಚ್ಚಿಸಲು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯುತ್‌ ವಾಹನಗಳು ಸೇರಿದಂತೆ ಹೊಸ ಉದ್ಯಮ ವಲಯಗಳ ಯೋಜನೆಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡಲು ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ವಿವಿಧ ವಿಶೇಷ ಆರ್ಥಿಕ ವಲಯಗಳನ್ನು ‘ಟೌನ್‌ಶಿಪ್‌’ಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅದಕ್ಕೆ ಪೂರಕವಾಗುವ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿ ತರಬೇಕು. ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲು ನಿಯಮಗಳಿಗೆ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

ವಿವಾದಗಳನ್ನು ನ್ಯಾಯಾಲಯದ ಹೊರಗೆ ಪರಿಹರಿಸಲು ಪ್ರತ್ಯೇಕವಾದ ವಿವಾದ ಪರಿಹಾರ ವ್ಯವಸ್ಥೆ ರೂಪಿಸಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT