ಶನಿವಾರ, ಜನವರಿ 23, 2021
25 °C
ಒಪಿಡಿ ಬಂದ್‌ ಮಾಡಿ ಪ್ರತಿಭಟನೆ * ಕಪ್ಪು ಪಟ್ಟಿ ಧರಿಸಿ ಸೇವೆ ಸಲ್ಲಿಸಿದ ವೈದ್ಯರು

ಖಾಸಗಿ ಆಸ್ಪತ್ರೆಗಳ ಕಡೆ ಸುಳಿಯದ ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ  ಹೊರರೋಗಿ ವಿಭಾಗ (ಒಪಿಡಿ) ಬಂದ್‌ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಕೂಡ ಅಷ್ಟಾಗಿ ಆಸ್ಪತ್ರೆಗಳ ಕಡೆಗೆ ಮುಖ ಹಾಕಲಿಲ್ಲ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ ಸೇವೆಯನ್ನು ಬಹಿಷ್ಕರಿಸುವಂತೆ ಐಎಂಎ ಸೂಚಿಸಿತ್ತು. ಆದರೆ, ರೋಗಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಆಸ್ಪತ್ರೆಗಳು ಮಧ್ಯಾಹ್ನದ ಬಳಿಕ ಒಪಿಡಿ ಸೇವೆ ಪ್ರಾರಂಭಿಸಿದ್ದವು.

ಹೊರರೋಗಿ ವಿಭಾಗ ಹೊರತುಪಡಿಸಿ ಉಳಿದ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗಲಿಲ್ಲ. ಸೇವೆಗೆ ಹಾಜರಾಗಿದ್ದ ಎಲ್ಲ ವೈದ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿದರು. ಆಸ್ಪತ್ರೆಗಳ ಆವರಣದಲ್ಲಿ ಒಪಿಡಿ ಬಂದ್ ಎಂಬ ಫಲಕವನ್ನು ಹಾಕಿದ್ದರೂ ಆಸ್ಪತ್ರೆಗಳ ಆವರಣದಲ್ಲಿಯೇ ರೋಗಿಗಳು ಮಧ್ಯಾಹ್ನದವರೆಗೂ ಕಾದು ಮನೆಗೆ ತೆರಳಿದರು. ಕೋವಿಡ್ ಹಾಗೂ ತುರ್ತು ಚಿಕಿತ್ಸೆಗಳನ್ನು ಎಂದಿನಂತೆ ನೀಡಲಾಯಿತು. ಸಂಜೆಯ ವೇಳೆಗೆ ಹೊರ ರೋಗಿಗಳ ವಿಭಾಗವು ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾದವು.

ಸರ್ಕಾರಿ ಆಸ್ಪತ್ರೆಗಳಲ್ಲಿಯೂ ರೋಗಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿತ್ತು. ಐಎಂಎ ನಡೆಯನ್ನು ಖಂಡಿಸಿ, ಕೆಲ ಆಯುರ್ವೇದ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ರೋಗಿಗಳಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡಿದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.