ಶನಿವಾರ, ಏಪ್ರಿಲ್ 1, 2023
31 °C
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ

ಕೋವಿಡ್ 3ನೇ ಅಲೆ: ವೈದ್ಯರಿಗೆ ಮಕ್ಕಳ ಚಿಕಿತ್ಸೆ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಮೂರನೇ ಅಲೆಯ ಕಾರಣ ಕೊರೊನಾ ಸೋಂಕಿತ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಆಸ್ಪತ್ರೆಗಳ ಸಿಬ್ಬಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವೈದ್ಯರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಸದ್ಯ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ ಮತ್ತು ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಹಾಗಾಗಿ, ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ’ ಎಂದರು.

ಮಕ್ಕಳ ಆರೈಕೆ ವಿಭಾಗ: ‘ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಆರಂಭಿಸಲಾಗುತ್ತಿದೆ. ಅದಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನೂ ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಮೈಮರೆತರೆ ಮೂರನೇ ಅಲೆ ಅಪ್ಪಳಿಸಲಿದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ 70 ರಷ್ಟು ಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ’ ಎಂದರು.

‘ರಾಜ್ಯವು ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹಂಚಿಕೊಳ್ಳುವುದರಿಂದ ಕೋವಿಡ್ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು