1.5 ಕೋಟಿ ಡೋಸ್ ಲಸಿಕೆ ಪೂರೈಕೆಗೆ ಮನವಿ

ಬೆಂಗಳೂರು: ರಾಜ್ಯಕ್ಕೆ ಪ್ರತಿ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರಿಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಮಾಡಿ ರಾಜ್ಯದ ಆರೋಗ್ಯ ವ್ಯವಸ್ಥೆ ಸುಧಾರಣೆ ಕುರಿತು ಚರ್ಚೆ ನಡೆಸಿರುವ ಅವರು, ‘ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆ ಅತ್ಯಂತ ವೇಗದಲ್ಲಿ ನಡೆಯುತ್ತಿದೆ. ಆದಷ್ಟು ರಾಜ್ಯದ ಎಲ್ಲರಿಗೂ ಲಸಿಕೆ ನೀಡುವುದಕ್ಕೆ ಪೂರಕವಾಗಿ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಪೂರೈಸಬೇಕು’ ಎಂದು ಕೋರಿದ್ದಾರೆ.
ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇನ್ನೂ 250 ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅಗತ್ಯ ಅನುದಾನ ಮಂಜೂರು ಮಾಡಬೇಕು. ಕೇಂದ್ರ ಸರ್ಕಾರದ ಮಂಜೂರಾತಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರನ್ನು ಒತ್ತಾಯಿಸಿದ್ದಾರೆ.
‘ಡೀಮ್ಡ್ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟು ಹಂಚಿಕೆಗೆ ಕ್ರಮ ಕೈಗೊಳ್ಳಲು ಕೋರಲಾಗಿದೆ. ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ– ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಮನವಿ ಮಾಡಲಾಗಿದೆ. ರೂಪಾಂತರಿ ಕೊರೊನಾ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೆರವು ನೀಡುವಂತೆ ಹಾಗೂ ಹೆಚ್ಚಿನ ಪ್ರಮಾಣದ ದ್ರವರೂಪದ ವೈದ್ಯಕೀಯ ಆಮ್ಲಜನಕ ಹಂಚಿಕೆ ಮಾಡುವಂತೆಯೂ ಬೇಡಿಕೆ ಸಲ್ಲಿಸಲಾಗಿದೆ’ ಎಂದು ಸುಧಾಕರ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.