ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

45.44 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ: ಕೆ.ಎಸ್‌. ಈಶ್ವರಪ್ಪ

Last Updated 11 ಫೆಬ್ರುವರಿ 2022, 8:49 IST
ಅಕ್ಷರ ಗಾತ್ರ

ಬೆಂಗಳೂರು: ಜಲ ಜೀವನ ಮೀಷನ್‌ (ಜೆಜೆಎಂ) ಯೋಜನೆಯ ಅಡಿಯಲ್ಲಿ ಈವರೆಗೆ ರಾಜ್ಯದ 45.44 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ಕುಡಿಯುವ ನೀರು ಸಂಪರ್ಕ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼ202-21ರಲ್ಲಿ 3.43 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿತ್ತು. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ನಲ್ಲಿ ಮೂಲಕ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಗುರಿ ಇದೆ. ಈಗಾಗಲೇ 17.60 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಆರ್ಥಿಕ ವರ್ಷದ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸಲಾಗುವುದು ಎಂದರು.

2022-23ರಲ್ಲಿ 27.14 ಲಕ್ಷ ಮತ್ತು 2023-24ರಲ್ಲಿ 17.45 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಅದರೊಂದಿಗೆ ರಾಜ್ಯದ ಗ್ರಾಮೀಣ ಪ್ರದೇಶದ ಎಲ್ಲ 97.91 ಲಕ್ಷ ಮನೆಗಳಿಗೂ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ ಸಾಧಿಸಲಾಗುವುದು ಎಂದು ಹೇಳಿದರು.

ಜೆಜೆಎಂ ಯೋಜನೆಯಡಿ 16 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಇದೇ 9ರಂದು ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕಾಮಗಾರಿಗಳ ಮೂಲಕ 6,357 ಹಳ್ಳಿಗಳ 6.17 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.

ಉದ್ಯೋಗ ಖಾತರಿಯಲ್ಲೂ ಸಾಧನೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯ ಅನುಷ್ಠಾನದಲ್ಲೂ 2021-22ರಲ್ಲಿ ರಾಜ್ಯವು ಗಣನೀಯ ಸಾಧನೆ ಮಾಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 13 ಕೋಟಿ ಮಾನವ ದಿನಗಳಷ್ಟು ಉದ್ಯೋಗ ಸೃಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. 2021ರ ಡಿಸೆಂಬರ್‌ ತಿಂಗಳಲ್ಲೇ ಈ ಗುರಿಯನ್ನು ಸಾಧಿಸಲಾಗಿತ್ತು ಎಂದು ಈಶ್ವರಪ್ಪ ವಿವರಿಸಿದರು.

ಹೆಚ್ಚುವರಿಯಾಗಿ 1.40 ಕೋಟಿ ಮಾನವ ದಿನಗಳ ಸೃಜನೆಗೆ ₹ 715 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಈ ಗುರಿಯನ್ನೂ ಶೀಘ್ರದಲ್ಲಿ ಸಾಧಿಸಲಾಗುವುದು ಎಂದರು.

ಉದ್ಯೋಗ ಖಾತರಿ ಯೋಜನೆಯಡಿ ಈ ವರ್ಷ 32.41 ಲಕ್ಷ ಕುಟುಂಬಗಳ 60.87 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. ಅವರಲ್ಲಿ 30.05 ಲಕ್ಷ ಮಹಿಳೆಯರು, 5.80 ಲಕ್ಷ ಹಿರಿಯ ನಾಗರಿಕರು ಮತ್ತು 22,400 ಅಂಗವಿಕಲರು ಸೇರಿದ್ದಾರೆ. ಉದ್ಯೋಗ ಖಾತರಿ ಯೋಜನೆಯಡಿ ₹4,064 ಕೋಟಿ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಉದ್ಯೋಗ ಖಾತರಿ ಯೋಜನೆಯಡಿ 13.61 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 4.3 ಲಕ್ಷ ಕಾಮಗಾರಿಗಳು ಪೂರ್ಣಗೊಂಡಿವೆ. ಜಲ ಶಕ್ತಿ ಅಭಿಯಾನದ ಅಡಿಯಲ್ಲಿ 8.92 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 4.87 ಲಕ್ಷ ಕಾಮಗಾರಿಗಳು ಪೂರ್ಣಗೊಂಡಿವೆ. ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನದಲ್ಲಿ ಆರು ವರ್ಷಗಳ ಅವಧಿಯಲ್ಲಿ 3,275 ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಈ ಪೈಕಿ 2,335 ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT