ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ: ಸಿಸಿಬಿ ತನಿಖೆಗೆ ಆದೇಶ

Last Updated 20 ಜನವರಿ 2022, 19:16 IST
ಅಕ್ಷರ ಗಾತ್ರ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್‌.ಟಿ.ನಗರದಲ್ಲಿರುವ ಮನೆಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಪೊಲೀಸರು ಡ್ರಗ್ಸ್ ಸಾಗಣೆಯಲ್ಲಿ ಭಾಗಿಯಾಗಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅವರು ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಕೋರಮಂಗಲ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಸಂತೋಷ್ ಹಾಗೂ ಕಾನ್‌ಸ್ಟೆಬಲ್ ಶಿವಕುಮಾರ್‌ಗೆ ಬುಧವಾರ ಜಾಮೀನು ಮಂಜೂರಾಗಿತ್ತು. ಆರೋಪಿಗಳು ಎಲ್ಲಿಂದ ಮಾದಕ ವಸ್ತುಗಳನ್ನು ತರುತ್ತಿದ್ದರು, ಅದನ್ನು ಹೇಗೆ ಮಾರಾಟ ಮಾಡುತ್ತಿದ್ದರು, ಯಾರೊಂದಿಗೆಲ್ಲ ನಂಟು ಹೊಂದಿದ್ದರು ಎಂಬುದರ ಬಗ್ಗೆ ಪೊಲೀಸರು ಸರಿಯಾಗಿ ಮಾಹಿತಿ ಕಲೆಹಾಕಿರಲಿಲ್ಲ. ಅಗತ್ಯ ಪುರಾವೆಗಳನ್ನೂ ಸಂಗ್ರಹಿಸಿರಲಿಲ್ಲ. ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗಲು ಅಗತ್ಯವಿರುವ ಎಲ್ಲ ಅನುಕೂಲ ಮಾಡಿಕೊಟ್ಟಿದ್ದರು ಎಂಬ ಆರೋಪದಡಿ ಆರ್‌.ಟಿ.ನಗರ ಠಾಣೆಯ ಇನ್‌ಸ್ಪೆಕ್ಟರ್‌ ಹಾಗೂ ಪಿಎಸ್‌ಐ ಅವರನ್ನು ಅಮಾನತು ಮಾಡಲಾಗಿತ್ತು.ಸಿಬ್ಬಂದಿಯ ಪೂರ್ವಾಪರ ಪರಿಶೀಲಿಸದೆ ಅವರನ್ನು ಮುಖ್ಯಮಂತ್ರಿಯವರ ನಿವಾಸಕ್ಕೆ ಭದ್ರತೆಗೆ ನಿಯೋಜಿಸಿದ್ದಕ್ಕಾಗಿ ಇಬ್ಬರು ಡಿಸಿಪಿಗಳಿಗೆ ನೋಟಿಸ್‌ ನೀಡಲಾಗಿತ್ತು.

‘ಆರೋಪಿಗಳಿಗೆ ಜಾಮೀನು ಲಭಿಸಿದ್ದರಿಂದ ಸಾರ್ವಜನಿಕ ವಲಯದಲ್ಲಿ ಪೊಲೀಸ್‌ ಇಲಾಖೆ ಮುಜುಗರ ಅನುಭವಿಸುವಂತಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಮಿಷನರ್‌ ಪಾರದರ್ಶಕ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಅಪರಾಧ ಕೃತ್ಯಗಳಲ್ಲಿ ಭಾಗಿ: ಪೊಲೀಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ’

‘ಸಮಾಜ ವಿರೋಧಿ ಶಕ್ತಿಗಳ ಜೊತೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದರು.

ಚಾಮರಾಜಪೇಟೆ ವ್ಯಾಪ್ತಿಯಲ್ಲಿ ₹7.40 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಸಂಚಾರ ಪೊಲೀಸ್ ಠಾಣೆಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಾರ ಮಾತನಾಡಿದರು.

‘ಮುಖ್ಯಮಂತ್ರಿ ನಿವಾಸದ ಬಳಿ ಭದ್ರತೆಗೆ ನಿಯೋಜಿತರಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಪ್ರಕರಣದ ಸಂಬಂಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ನೇಮಿಸಿದ್ದ ಸಿಬ್ಬಂದಿಯೇ ಗಾಂಜಾ ಮಾರಾಟಗಾರರ ಜೊತೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ’ ಎಂದರು.

ಯುವ ಕಾಂಗ್ರೆಸ್‌ನ ಕೆಲ ನಾಯಕರು ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ‘ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ಕೊಟ್ಟರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಶಾಸಕ ಜಮೀರ್ ಅಹ್ಮದ್, ವಿಧಾನ ಪರಿಷತ್‌ ಸದಸ್ಯರಾದ ಯು.ಬಿ. ವೆಂಕಟೇಶ್, ರಮೇಶ್ ಗೌಡ ಮತ್ತು ಲೆಹರ್ ಸಿಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT