ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್‌ ಶುಲ್ಕ ಶೇ 10ರಷ್ಟು ಹೆಚ್ಚಳ: ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಕುಪೆಕ ಪ್ರತಿನಿಧಿಗಳ ಸಭೆ ಬಳಿಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ
Last Updated 22 ಜೂನ್ 2022, 19:12 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ ದಲ್ಲಿ ಖಾಸಗಿ ಅನುದಾನರಹಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶ ಶುಲ್ಕವನ್ನು ಶೇಕಡ 10ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಅನುದಾನರಹಿತ ಖಾಸಗಿ ಎಂಜಿ ನಿಯರಿಂಗ್‌ ಕಾಲೇಜುಗಳ ಒಕ್ಕೂಟ (ಕುಪೆಕ) ಪ್ರತಿನಿಧಿಗಳ ಜತೆ ಬುಧವಾರ ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ‘ಎರಡು ವರ್ಷಗಳಿಂದ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿರಲಿಲ್ಲ. ಈ ಬಾರಿ ಶೇ 25ರಷ್ಟು ಶುಲ್ಕ ಹೆಚ್ಚಳಕ್ಕೆ ಕುಪೆಕ ಬೇಡಿಕೆ ಇಟ್ಟಿತ್ತು. ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಮಾತ್ರ ಸಮ್ಮತಿ ಸೂಚಿಸ ಲಾಗಿದೆ’ ಎಂದರು.

‘ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಎಂಜಿನಿಯರಿಂಗ್‌ ಕಾಲೇಜುಗಳ ಶುಲ್ಕ ನಿಗದಿ ಸಮಿತಿ ಶಿಫಾರಸು ಮಾಡಿತ್ತು. ಅದನ್ನು ಅಂಗೀಕರಿಸಿ, ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಲಾಗಿದೆ. ನಿಗದಿತ ಶುಲ್ಕದ ಹೊರತಾಗಿ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಹಣ ಸಂಗ್ರಹಿ ಸದಂತೆ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಲಾಗಿದೆ. ಅವರೂ ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.

ಸಾಮಾನ್ಯ ವರ್ಗಕ್ಕೆ ಸೇರಿದ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಶೇ 45ರಷ್ಟು ಸೀಟುಗಳನ್ನು ಕಡಿಮೆ ದರದ ಶುಲ್ಕದಲ್ಲಿ ನೀಡಲಾಗುತ್ತದೆ.

‌ಶೇ 30ರಷ್ಟು ಸೀಟುಗಳನ್ನು ಹೆಚ್ಚಿನ ದರದ ಶುಲ್ಕದಲ್ಲಿ ಮತ್ತು ಶೇ 25ರಷ್ಟು ಸೀಟುಗಳನ್ನು ಅನಿವಾಸಿ ಭಾರತೀಯ ಅಥವಾ ಆಡಳಿತ ಮಂಡಳಿ ಕೋಟಾದಡಿ ನೀಡಲು ಅವಕಾಶವಿದೆ. ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶೇ 40ರಷ್ಟು ಸೀಟುಗಳನ್ನು ಕಡಿಮೆ ದರದ ಶುಲ್ಕದಲ್ಲಿ ಹಾಗೂ ತಲಾ ಶೇ 30ರಷ್ಟು ಸೀಟುಗಳನ್ನು ಹೆಚ್ಚಿನದ ದರದ ಶುಲ್ಕದಲ್ಲಿ ಮತ್ತು ಅನಿವಾಸಿ ಭಾರತೀಯ ಹಾಗೂ ಆಡಳಿತ ಮಂಡಳಿ ಕೋಟಾದಡಿ ನೀಡಬಹುದು ಎಂದು ಹೇಳಿದರು.

ಪರಿಷ್ಕೃತ ದರದ ಶುಲ್ಕ ಪಡೆದು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಕುರಿತು ಎಂಜಿನಿಯರಿಂಗ್‌ ಕಾಲೇಜುಗಳ ಆಡಳಿತ ಮಂಡಳಿಗಳು ಒಂದು ವಾರದೊಳಗೆ ಒಪ್ಪಂದ ಮಾಡಿಕೊಳ್ಳಬೇಕು. ಕಳೆದ ಶೈಕ್ಷಣಿಕ ವರ್ಷದಲ್ಲಿ 30,000ಕ್ಕೂ ಹೆಚ್ಚು ಎಂಜಿನಿಯರಿಂಗ್‌ ಸೀಟುಗಳು ಭರ್ತಿಯಾಗದೇ ಉಳಿದಿದ್ದವು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್‌, ಕುಪೆಕ ಅಧ್ಯಕ್ಷ ಮಂಜುನಾಥ ಭಂಡಾರಿ ಮತ್ತು ಪದಾಧಿಕಾರಿಗಳು ಸಭೆಯಲ್ಲಿದ್ದರು.

ಮುಂದಿನ ವರ್ಷದಿಂದ ಕಾಮೆಡ್‌–ಕೆ ರದ್ದು

‘ರಾಜ್ಯದಲ್ಲಿ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಮುಂದಿನ ವರ್ಷದಿಂದ ಕಾಮೆಡ್‌–ಕೆ ಪ್ರವೇಶ ಪರೀಕ್ಷೆ ಇರುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ತಿಳಿಸಿದರು.

‘ಕಾಮೆಡ್‌–ಕೆ ಪ್ರವೇಶ ಪರೀಕ್ಷೆಯನ್ನು ರದ್ದುಮಾಡಿ, ಸರ್ಕಾರದ ಸಿಇಟಿಯ ಭಾಗವಾಗಲು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್‌ ಕಾಲೇಜುಗಳ ಒಕ್ಕೂಟ ಒಪ್ಪಿಕೊಂಡಿದೆ. ಈ ಸಂಬಂಧ ಒಪ್ಪಂದ ಮಾಡಿಕೊಂಡು, ಮುಂದಿನ ವರ್ಷದಿಂದ ಸಿಇಟಿ ಮೂಲಕ ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT